Saturday, November 23, 2024
Homeಬೆಂಗಳೂರುಹಿಂಗಾರು ಮಳೆ ಹಾನಿ ಕುರಿತು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ

ಹಿಂಗಾರು ಮಳೆ ಹಾನಿ ಕುರಿತು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ

CM's video interaction with DCs on monsoon damage

ಬೆಂಗಳೂರು, ಅ.26- ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಅನಾಹುತಗಳಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ವಿಡಿಯೋ ಸಂವಾದ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ಜಿಲ್ಲೆಯಿಂದಲೇ ವರ್ಚ್ಯುಯಲ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಭೆಯಲ್ಲಿ ಭಾಗವಹಿಸಿದ್ದರು.

ಗೃಹ ಕಚೇರಿ ಕೃಷ್ಣದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಹಿಂಗಾರು ಮಳೆಯ ಅತಿವೃಷ್ಟಿಯಿಂದಾಗಿ ಹಾನಿಗೊಳಗಾಗಿರುವ ಕೃಷಿ ಬೆಳೆಗಳ ಸಮೀಕ್ಷೆಯನ್ನು ಜರೂರಾಗಿ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಲಾಯಿತು. ವ್ಯಾಪಕ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ, ಮೇಲ್ಸೇತುವೆ, ವಿದ್ಯುತ್ ಕಂಬ, ಕಟ್ಟಡ ಹಾಗೂ ಮನೆಗಳ ನಷ್ಟಗಳ ಬಗ್ಗೆ ತುರ್ತು ವರದಿಯನ್ನು ಸಿದ್ಧಪಡಿಸಿ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಹಾಗೂ ನಷ್ಟದ ಅಂದಾಜು ಮೊತ್ತವನ್ನು ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಅನುಪಾಲನಾ ಕ್ರಮಗಳನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿರುವ ಹಣವನ್ನು ಬಳಕೆ ಮಾಡಿಕೊಂಡು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು. ಸಂಪರ್ಕ ವ್ಯವಸ್ಥೆಗಳನ್ನು ಸುಗಮ ಗೊಳಿಸುವ ಜೊತೆಗೆ ಸಂತ್ರಸ್ತರ ಪುನರ್‌ವಸತಿ ಕೇಂದ್ರಗಳಲ್ಲಿ ಮೂಲಸೌಲಭ್ಯಗಳನ್ನು
ಕಲ್ಪಿಸಲು ಕಾಳಜಿ ವಹಿಸುವಂತೆಯೂ ಸೂಚಿಸಲಾಗಿದೆ.

ಜಿಲ್ಲಾಧಿಕಾರಿಗಳು ತೀವ್ರ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಬೇಕು. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕಂದಾಯ ಮತ್ತು ಆರೋಗ್ಯ ಕುಟುಂಬ ಕಲ್ಯಾಣ, ಇಂಧನ ಹಾಗೂ ಶಿಕ್ಷಣ ಇಲಾಖೆಗಳು ಪರಸ್ಪರ ಸೌಹಾರ್ದತೆಯೊಂದಿಗೆ ಕೆಲಸ ನಿರ್ವಹಿಸಬೇಕು. ಸಹಾಯವಾಣಿಗಳು ಸಕ್ರಿಯವಾಗಿರುವುದರ ಜೊತೆಗೆ ಅದಕ್ಕೆ ಬರುವ ಕರೆಗಳಿಗೆ ಖುದ್ದಾಗಿ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.

RELATED ARTICLES

Latest News