ಶಿವಮೊಗ್ಗ ಸ್ಪೋಟದ ಗಂಭೀರ ತನಿಖೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು, ಜ.21-ಶಿವಮೊಗ್ಗದ ಹುಣಸೋಡು ಸಮೀಪ ನಡೆದ ಕಲ್ಲು ಗಣಿಗಾರಿಕೆಯ ಡೈನಾಮೈಟ್ ಸ್ಫೋಟದ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ದಿಗ್ಭ್ರಮೆ ವ್ಯಕ್ತ ಪಡಿದಿದ್ದು, ಸೂಕ್ತ ತನಿಖೆ ನಡೆಸಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ದುರಂತಗಳು ನಡೆಯದಂತೆ ಮುನ್ನೇಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದೆ.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದು, ಈ ರೀತಿಯ ಘಟನೆಗಳ ಬಗ್ಗೆ ಗಂಭೀರವಾಗಿ ತನಿಖೆ ನಡೆಸುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ದುರಂತಗಳು ನಡೆಯುವುದನ್ನು ತಪ್ಪಿಸಬಹುದಾಗಿದೆ ಎಂದಿದ್ದಾರೆ.  ಅದೇ ಸಮಯಕ್ಕೆ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಮತ್ತಿತರರು ಟ್ವಿಟ್ ಮಾಡಿದ್ದರು, ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು.

ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.