ನಾಗ್ಪುರ, ನ. 12: ಸ್ವಹಿತಾಸಕ್ತಿಗಾಗಿ ಸಂವಿಧಾನವನ್ನು ತಿರುಚುವಂತಹ ಕಾರ್ಯ ಮಾಡಿರುವುದು ಕಾಂಗ್ರೆಸ್ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬಿಜೆಪಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಬದಲಾಯಿಸುವುದಿಲ್ಲ ಅಥವಾ ಹಾಗೆ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಗಡ್ಕರಿ ಕಟೋಲ್ನಲ್ಲಿ ಬಿಜೆಪಿ ಅಭ್ಯರ್ಥಿ ಚರಣ್ ಸಿಂಗ್ ಠಾಕೂರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ದೇಶದ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಹೇಳುತ್ತಿರುವ ಕಾಂಗ್ರೆಸ್ ವಿರುದ್ಧ ಅವರು ವಾಗ್ದಾಳಿ ನಡೆಸಿದ ಅವರು ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಬದಲಾಯಿಸುವುದಿಲ್ಲ ಅಥವಾ ಹಾಗೆ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಗಡ್ಕರಿ ಹೇಳಿದರು.
ಹಿರಿಯ ಬಿಜೆಪಿ ನಾಯಕ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ತಮ ಅಭಿಪ್ರಾಯವನ್ನು ಬಲಪಡಿಸಿದರು. ವಾಕ್ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ಮತ್ತು ಮೂಲಭೂತ ಹಕ್ಕುಗಳಂತಹ ಸಂವಿಧಾನದ ಪ್ರಮುಖ ಲಕ್ಷಣಗಳನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದರು. ಈ ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ತಮ ಸ್ವಾರ್ಥಕ್ಕಾಗಿ ಸಂವಿಧಾನ ತಿರುಚುವಂತಹ ಕಾರ್ಯಕ್ಕೆ ಕೈ ಹಾಕಿದ್ದರು ಎಂದು ಅವರು ಆರೋಪಿಸಿದರು.