ಬಳ್ಳಾರಿ,ಅ.25- ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜ್ಯ ಸರ್ಕಾರಕ್ಕೆ ಅಸ್ತಿತ್ವದ ಭೀತಿ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದೆ. ಈ ಫಲಿತಾಂಶ ಬಂದ ನಂತರ ಸರ್ಕಾರದ ಪರಿಸ್ಥಿತಿಯು ಡೋಲಾಯಮಾನವಾಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲೀಕಿ, ಮುಡಾ , ಬೇಲಿಕೇರಿ ಅದಿರು ಪ್ರಕರಣದಲ್ಲಿ ಸರ್ಕಾರ ಭಾಗಿಯಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ ಎಂದು ವಾಗ್ದಾಳಿ ನಡೆಸಿದರು.
ಜಾತಿ ಮತ್ತು ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದು ಮುಖ್ಯಮಂತ್ರಿ ಸಿದ್ದ ರಾಮಯ್ಯನವರಿಗೆ ಕಾಯಕವಾಗಿದೆ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ದಿನಕ್ಕೊಂದು ವಿಷಯಗಳನ್ನು ಮುಂದಿಡುತ್ತಾರೆ. ಈ ಸರ್ಕಾರ ಆದಷ್ಟು ಬೇಗ ತೊಲಗಿದರೆ ಸಾಕು ಎಂದು ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ಒಂದೂವರೆ ವರ್ಷ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೇವಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡು ಪ್ರತಿಯೊಂದು ಇಲಾಖೆಯಲ್ಲೂ ಕಮಿಷನ್ ಹೊಡೆಯುವುದೇ ಕಾಯಕವಾಗಿದೆ ಎಂದು ಆರೋಪಿಸಿದರು.
ನಾವು ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗುವುದಿಲ್ಲ. ಈಗಿನ ಲೆಕ್ಕಾಚಾರ ನೋಡಿದರೆ ಅವರೇ ಕಿತ್ತಾಡಿಕೊಂಡು ಮನೆಗೆ ಹೋಗುವ ಲಕ್ಷಣವಿದೆ. ಬಿಜೆಪಿ ಪ್ರತಿಪಕ್ಷವಾಗಿ ಸರ್ಕಾರದ ದನಿಯಾಗಿ ಕೆಲಸ ಮಾಡುತ್ತಿದೆ. ನಮಗ ವಾಮ ಮಾರ್ಗದ ಮೂಲ ಅಧಿಕಾರ ಹಿಡಿಯುವ ಆತುರವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.