ಬೆಂಗಳೂರು,ಏ.5- ಪ್ರತಿಯೊಂದು ಕ್ಷೇತ್ರದಲ್ಲೂ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ವರಿಷ್ಠರು 14 ಕ್ಷೇತ್ರಗಳ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳ ಕಾಂಗ್ರೆಸ್ ಮುಖಂಡರ ಜೊತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು.
ಸಚಿವರಾದ ಎಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಜಮೀರ್ ಅಹಮ್ಮದ್ ಖಾನ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.
ಈ ವೇಳೆ ಮುಖ್ಯಮಂತ್ರಿಯವರು ಅತೃಪ್ತರು, ಅಸಮಾಧಾನಿತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜವಾಬ್ದಾರಿ ಉಸ್ತುವಾರಿ ಸಚಿವರದ್ದಾಗಿರುತ್ತದೆ ಎಂದು ತಾಕೀತು ಮಾಡಿದರು.
ಶಾಸಕರು, ಸಚಿವರು, ನಿಗಮ ಮಂಡಳಿಗಳ ಅಧ್ಯಕ್ಷರುಗಳು ಕ್ಷೇತ್ರಗಳಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಟಿಕೆಟ್ ವಂಚಿತರು, ಅವಕಾಶ ವಂಚಿತರೊಂದಿಗೆ ಮಾತುಕತೆ ನಡೆಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖಂಡರ ಜೊತೆ ಚರ್ಚೆ ನಡೆಸಲಾಗಿದೆ. ಈ ಬಾರಿ ಬಿಜೆಪಿಯ ಮತ ಗಳಿಕೆಯ ಪ್ರಮಾಣ ಕುಸಿಯಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಷ್ಟೇ ಅಲ್ಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಪಕ್ಷ ಸೋಲಿಸಲಿದೆ ಎಂದರು.
ತಾವು ಪ್ರಧಾನಮಂತ್ರಿಯವರನ್ನು ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ಕಳೆದ 10 ವರ್ಷಗಳಿಂದ ಅವರು ಏನು ಮಾಡುತ್ತಾರೆ ಎಂದು ಪ್ರಶ್ನೆ ಮಾಡುತ್ತೇನೆ. ಪ್ರಶ್ನೆ ಮಾಡುವುದು ಈ ದೇಶದ ನಾಗರಿಕನಾದ ನನ್ನ ಕರ್ತವ್ಯ, ಇದು ತಪ್ಪಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.