ಬೆಂಗಳೂರು, ಜು.21- ಸೋನಿಯಾಗಾಂಧಿ ಅವರ ವಿಚಾರಣೆಯನ್ನು ವಿರೋಧಿಸಿ ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುವ ವೇಳೆ ಎರಡು ಕಡೆ ಕಾರುಗಳಿಗೆ ಬೆಂಕಿ ಹಚ್ಚಿರುವ ಪ್ರಕರಣಗಳು ನಡೆದಿವೆ.
ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿ ಎದುರು ಕಾರನ್ನು ಚಾಲನೆ ಮಾಡಿಕೊಂಡು ಬಂದ ಯುವ ಕಾಂಗ್ರೆಸ್ ನಾಯಕರು ನಂತರ ಅದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮತ್ತೊಂದೆಡೆ ಶೇಷಾದ್ರಿಪುರಂನ ನೆಹರು ಸರ್ಕಲ್ ಬಳಿಯೂ ಕಾರಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸುವ ವೇಳೆಗೆ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಎರಡೂ ಕಡೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡು ಒಂದು ವೇಳೆ ಸೋಟ ಸಂಭವಿಸಿದ್ದರೆ ಭಾರೀ ಅನಾಹುತವಾಗುವ ಸಾಧ್ಯತೆಯಿತ್ತು. ಹೀಗಾಗಿ ಕಾರ್ಯಕರ್ತರ ನಡೆಗೆ ಆಕ್ರೋಶ ಕೇಳಿಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.