ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಫೆ.5- ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿಯಿಂದ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಕಾರ್ಮಿಕ ವಿಭಾಗದ ವತಿಯಿಂದ ಕೇಂದ್ರ ಕಚೇರಿ ಮುಂಭಾಗ ಇಂದು ರಸ್ತೆ ಮಧ್ಯದಲ್ಲೇ ಅಡುಗೆ ತಯಾರಿಸಿ ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಟೀಕಾ ಪ್ರಹಾರ ನಡೆಸಿದರು.

ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಬಿಜೆಪಿ ನಾಯಕರು ಕೇವಲ ಪ್ರಚಾರ ಹಾಗೂ ಸುಳ್ಳು ಭರವಸೆ ನೀಡುವುದರಲ್ಲೇ ಮಗ್ನರಾಗಿದ್ದಾರೆ ಎಂದು ಕಿಡಿಕಾರಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಬಸವಳಿದಿದ್ದಾರೆ. ಇದರ ನಡುವೆ ಅಡುಗೆ ಅನಿಲ ಹಾಗೂ ಆಹಾರ ಧಾನ್ಯಗಳ ಬೆಲೆ ಏರಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜನರೇ ಇದರ ವಿರುದ್ಧ ಹೋರಾಡಬೇಕಾದ ಅಗತ್ಯತೆ ಎದುರಾಗಿದೆ ಎಂದು ಹೇಳಿದರು.