Thursday, December 12, 2024
Homeರಾಜ್ಯಕೋವಿಡ್ ಮೇಲೆ ನಿಗಾ: ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ

ಕೋವಿಡ್ ಮೇಲೆ ನಿಗಾ: ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರು,ಜ.2- ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣಪ್ರಕಾಶ್ ಪಾಟೀಲ್, ಕೋವಿಡ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಅದನ್ನು ನಿಯಂತ್ರಿಸುವುದು ಮತ್ತು ಚಿಕಿತ್ಸೆಗೆ ಪೂರ್ವ ತಯಾರಿ ಮಾಡಿಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸಭೆಯಲ್ಲಿ ಚರ್ಚಿಸಲಾಗಿದೆ. ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಆಮ್ಲಜನಕದ ಬೆಡ್‍ಗಳು, ತುರ್ತು ಚಿಕಿತ್ಸಾ ಘಟಕಗಳು, ವೆಂಟಿಲೇಟರ್ ಸೇರಿದಂತೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆಗಳನ್ನು ಸಜ್ಜುಗೊಳಿಸಿಕೊಳ್ಳಲು ಸೂಚಿಸಲಾಗಿದೆ. ಕಳೆದ ಬಾರಿಯಾದಂತೆ ಆಕ್ಸಿಜನ್ ಅಥವಾ ಔಷಧಿಗಳ ಕೊರತೆಯಿಂದ ಜನರಿಗೆ ತೊಂದರೆಯಾಗಬಾರದು. ಅದಕ್ಕೆ ಅಗತ್ಯವಾದ ಪೂರ್ವ ಸಿದ್ಧತೆಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.

ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ ಎಂದಾಕ್ಷಣ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ರೂಪಾಂತರಿ ಉಪತಳಿಗಳು ಪ್ರಸರಣಾ ಸಾಮಥ್ರ್ಯವನ್ನು ಹೆಚ್ಚು ಹೊಂದಿದೆ. ಆದರೆ ಪ್ರಾಣಾಂತಿಕವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿಯಾಗಿದೆ. ಹೀಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಮುಂಜಾಗ್ರತೆ ಅಗತ್ಯವಿದೆ ಎಂದರು.
60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು. ಜನಸಂದಣಿ ಪ್ರದೇಶಗಳಲ್ಲಿ ಕೋವಿಡ್ ಪ್ರಮಾಣಿತ ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಗ್ಯಾರಂಟಿಗಳ ಬೇಡ ಎನ್ನುವ ಧೈರ್ಯ ಬಿಜೆಪಿಗಿದೆಯೇ?: ಸಚಿವ ಮಧು ಬಂಗಾರಪ್ಪ

ಇಲ್ಲಿವರೆಗೂ ರಾಜ್ಯದಲ್ಲಿ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದ 10 ಜನ ಸಾವನ್ನಪ್ಪಿದ್ದಾರೆ. ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ ಬೇರೆ ಆರೋಗ್ಯದ ಸಮಸ್ಯೆಗಳಿದ್ದವು ಎಂದರು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಹೇಳಿದರು.

ಇಂದಿನ ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರುಗಳ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕವಾದ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. 30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರೂ ಮತ್ತು ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದರು.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮಥ್ರ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

RELATED ARTICLES

Latest News