ಬೆಂಗಳೂರು,ಅ.23- ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ಯೋಗೇಶ್ವರ್, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ದಿನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.
ಇಲ್ಲಿಯವರೆಗೆ ತಾವು ನನಗೆ ನೀಡಿದ ಸಹಕಾರಕ್ಕೆ ವಂದನೆಗಳು ಎಂದು ಯೋಗೇಶ್ವರ್ ವಿಜಯೇಂದ್ರಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಈ ಪತ್ರವನ್ನು ವಾಟ್ಸಪ್ ಮೂಲಕ ಕಳುಹಿಸಿಕೊಟ್ಟಿದ್ದಾರೆ.
ಮೂರು ದಿನಗಳ ಹಿಂದೆ ಯೋಗೇಶ್ವರ್ ವಿಧಾನಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಕೊಟ್ಟಿದ್ದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಗದಿದ್ದರಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಕೊನೆ ಕ್ಷಣದವರೆಗೂ ಎನ್‌ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಎಲ್ಲಾ ಪ್ರಯತ್ನಗಳನ್ನು ನಡೆಸಿದರೂ ಅದು ಕೈಗೂಡಲಿಲ್ಲ. ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವ ಆಫರ್‌ನ್ನು ಅವರು ನಯವಾಗಿಯೇ ತಿರಸ್ಕರಿಸಿದ್ದರು.
ಇದೀಗ ಕಾಂಗ್ರೆಸ್ ಸೇರಿರುವ ಯೋಗೇಶ್ವರ್ ಗುರುವಾರ ಅಪಾರ ಸಂಖ್ಯೆ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಅ.28 ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನವೆಂಬರ್ 13ರಂದು ಮತದಾನ ನಡೆದು ನ.23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.