ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಲ್ಲ ‘ಗಜ’ ಚಂಡಮಾರುತ
ಬೆಂಗಳೂರು, ನ.13-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಗಜ ಚಂಡಮಾರುತದ ಪ್ರಭಾವ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆದರೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದರು.
ಚಂಡಮಾರುತವು ತಮಿಳುನಾಡು ಹಾಗೂ ಕೇರಳ ಕಡೆಗೆ ಚಲಿಸುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ನಮ್ಮ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ವಿರಳ. ಇಂದು ಚಂಡಮಾರುತದ ಚಲನೆಯ ದಿಕ್ಕು, ವೇಗ ಆಧರಿಸಿ ಮುಂದಿನ ಮುನ್ಸೂಚನೆ ನಿರೀಕ್ಷಿಸಬಹುದಾಗಿದೆ ಎಂದರು.ನ.15 ಮತ್ತು 16ರಂದು ಮಾತ್ರ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಸ್ಪಷ್ಟಪಡಿಸಿದರು.
Facebook Comments