Monday, November 25, 2024
Homeಇದೀಗ ಬಂದ ಸುದ್ದಿರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ದಿನಾಂಕ ಘೋಷಣೆ..?

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ದಿನಾಂಕ ಘೋಷಣೆ..?

ಬೆಂಗಳೂರು,ಆ.16- ಲೋಕಸಭೆ ಚುನಾವಣೆ ಕಾವು ಮುಗಿದ ಬೆನ್ನಲ್ಲೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಆಯೋಗ ಇಂದು ಸಮಯವನ್ನು ನಿಗದಿಪಡಿಸುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ ಸೆಪ್ಟಂಬರ್ ತಿಂಗಳ ಕೊನೆಯ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಮನಗರ ಜಿಲ್ಲೆ, ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ, ಬಳ್ಳಾರಿಯಿಂದ ತುಕಾರಾಂ ಮತ್ತು ಹಾವೇರಿಯಿಂದ ಬಸವರಾಜ ಬೊಮಾಯಿ ಆಯ್ಕೆಯಾಗಿದ್ದರು.

ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ (ಚನ್ನಪಟ್ಟಣ), ತುಕಾರಾಂ (ಸಂಡೂರು), ಬಸವರಾಜ ಬೊಮಾಯಿ (ಶಿಗ್ಗಾವಿ) ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು.ತೆರವಾಗಿರುವ ಈ ಮೂರು ಕ್ಷೇತ್ರಗಳಿಗೆ ದಿನಾಂಕವನ್ನು ಘೋಣೆ ಮಾಡುವ ಸಂಭವವಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ಎನ್ಡಿಎ ನಡುವೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದೆ.

ಶಿಗ್ಗಾವಿ ಕ್ಷೇತ್ರವು ಬಿಜೆಪಿ ತೆಕ್ಕೆಯಲ್ಲಿದ್ದರೆ, ಚನ್ನಪಟ್ಟಣ ಜೆಡಿಎಸ್ ಹಾಗೂ ಸಂಡೂರು ಕಾಂಗ್ರೆಸ್ ಗೆಲುವು ಸಾಧಿಸಿತ್ತು.ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 19 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಇದೀಗ ಮೂರು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದ್ದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಫಿನಿಕ್‌್ಸನಂತೆ ಪುಟಿದೇಳಲು ಸಜ್ಜಾಗಿದೆ.

ಲೋಕಸಭಾ ಚುನಾವಣೆ ನಂತರ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಸಾಕಷ್ಟು ರಾಜಕೀಯ ಏರುಪೇರುಗಳು ಉಂಟಾಗಿವೆ. ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಚಿವರಾಗಿದ್ದ ಬಿ.ನಾಗೇಂದ್ರ ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದ್ದು, ಜೈಲುಪಾಲಾಗಿದ್ದಾರೆ.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪ ಕೇಳಿಬಂದಿತ್ತು. ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ತೊಡೆ ತಟ್ಟಿದ ಎನ್ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾಯಿತು.

ಸೇರಿಗೆ ಸವ್ವಾ ಸೇರು ಎನ್ನುವಂತೆ ಕಾಂಗ್ರೆಸ್ ಕೂಡ ಪ್ರತಿಪಕ್ಷಗಳ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ ಮೈಸೂರಿನಲ್ಲಿ ಭರ್ಜರಿ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಿತ್ತು.
ಮುಡಾ ಮತ್ತು ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಉಪಚುನಾವಣೆಯಲ್ಲಿ ಸಾಕಷ್ಟು ಪ್ರತಿಧ್ವನಿಸುವ ಸಾಧ್ಯತೆಯಿದೆ.

ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳನ್ನೇ ಮುಂದಿಟ್ಟುಕೊಂಡು ಪ್ರಚಾರಕ್ಕಿಳಿಯಲು ಮುಂದಾಗಿವೆ. ಇದರ ನಡುವೆ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಗೊಂದಲದ ಬಗ್ಗೆಯೂ ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳುತ್ತಿದ್ದರೂ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಆರ್ಥಿ ನೆರವು ನೀಡುವ ಗೃಹಲಕ್ಷ್ಮಿ, ಯುವನಿಧಿ ಯೋಜನೆಯಡಿ ಡಿಪ್ಲೊಮೊ ಮತ್ತು ಪದವಿ ವ್ಯಾಸಂಗ ಮುಗಿಸಿದ ಯುವಕರಿಗೆ ನೀಡುತ್ತಿರುವ ಆರ್ಥಿಕ ನೆರವು ಗೊಂದಲ ಸೃಷ್ಟಿಸಿದೆ. ಇದು ಚುನಾವಣೆಯಲ್ಲಿ ಸದ್ದು ಮಾಡುವ ಸಂಭವವೇ ಹೆಚ್ಚಾಗಿದೆ.

ಇನ್ನು ಪ್ರತಿಪಕ್ಷಗಳಿಗೂ ಠಕ್ಕರ್ ಕೊಡಲು ಮುಂದಾಗಿರುವ ಕಾಂಗ್ರೆಸ್ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಲು ಮುಂದಾಗಿದೆ.

ಕೇಂದ್ರದ ಪುರಸ್ಕೃತ ಯೋಜನೆಗಳಿಗೆ ಹಣ ನೀಡದಿರುವುದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ತೆರಿಗೆ ಪಾವತಿ ವಿಳಂಬ, ನೀರಾವರಿ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಉಂಟಾಗಿರುವ ಅನ್ಯಾಯವನ್ನು ಜನತೆಯ ಮುಂದಿಡಲಿದೆ.

ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ತಲೆದಂಡಕ್ಕೆ ಪ್ರತಿಪಕ್ಷ ಹವಣಿಸುತ್ತಿದೆ. ಈ ಮೂರು ಕ್ಷೇತ್ರಗಳನ್ನು ಗೆದ್ದು ತಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಅನಿವಾರ್ಯತೆ ಅವರಿಗಿದ್ದರೆ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಥಾನವನ್ನು ಪಲ್ಲಟಗೊಳಿಸಲು ಯತ್ನಿಸುತ್ತಿರುವ ಮತ್ತೊಂದು ಬಣಕ್ಕೆ ಫಲಿತಾಂಶದ ಮೂಲಕ ಉತ್ತರ ನೀಡಲು ಅವರಿಗೆ ಇದು ಸೂಕ್ತ ವೇದಿಕೆಯಾಗಿದೆ.

ಇದೇ ರೀತಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೂ ಉಪಚುನಾವಣೆ ವೇದಿಕೆಯಾಗುವುದರಲ್ಲಿ ಅನುಮಾನವೇ ಇಲ್ಲ.

RELATED ARTICLES

Latest News