ಬೆಂಗಳೂರು, ಜು.5- ರಾಜಧಾನಿಯಲ್ಲಿ ಶಂಕಿತ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬಿಬಿಎಂಪಿ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಎಲ್ಲೆಂದರಲ್ಲಿ ಕಸ ಎಸೆದರೆ ಭಾರೀ ದಂಡ ತೆರಬೇಕಾಗುತ್ತದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಪಾಲಿಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಂಡಿದೆ.
ಸೊಳ್ಳೆಗಳಿಂದ ಮಾರಣಾಂತಿಕ ಡೆಂಘೀ ಹರಡುತ್ತಿದ್ದು, ಅದರಲ್ಲೂ ತ್ಯಾಜ್ಯದಿಂದ ಬೇಗ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಎಲ್ಲೆಂದರಲ್ಲಿ ಕಸ ಎಸೆಯದಂತೆ ನಗರವಾಸಿಗಳಿಗೆ ಸೂಚನೆ ನೀಡಲಾಗಿದ್ದು, ಸದ್ಯ ತ್ಯಾಜ್ಯ ಎಸೆದರೆ 50ರೂ. ದಂಡ ವಿಧಿಸಲಾಗುತ್ತಿದ್ದು, ಈ ಮೊತ್ತವನ್ನು 500ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಅದರನ್ವಯ ಪಾಲಿಕೆ ಕ್ರಮ ಕೈಗೊಂಡಿದೆ. ಸದ್ಯದಲ್ಲೇ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಿಗೂ ಈ ಆದೇಶ ಹೊರಡಿಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು.
ಯಾವುದೇ ಕಾರಣಕ್ಕೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಾಲ್ಕೈದು ದಿನಗಳಿಗೊಮೆ ಡ್ರಮ್, ನೀರಿನ ತೊಟ್ಟಿಗಳಲ್ಲಿ ನೀರನ್ನು ಬದಲಾಯಿಸುತ್ತಿರಬೇಕು. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳ ಸಲಹೆ-ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.
ಇಲ್ಲಿಯವರೆಗೂ ಬಿಬಿಎಂಪಿ ಜಾಗೃತಿ ಮೂಡಿಸುತ್ತಲೇ ಬಂದಿದ್ದು, ನಗರದ ಜನತೆ ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಈ ದಂಡ ಪ್ರಯೋಗಕ್ಕೆ ಮುಂದಾಗಿದೆ. ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಕಟ್ಟಡಗಳು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕರ್ನಾಟಕ ಮುನ್ಸಿಪಲ್ ಕಾಯ್ದೆಯನ್ವಯ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ. ಮಂಗಳೂರಿನಲ್ಲಿ ಈಗಾಗಲೇ ಈ ಕಾಯ್ದೆ ಜಾರಿಯಲ್ಲಿದ್ದು, ಬೆಂಗಳೂರಿನಲ್ಲೂ ಸಹ ಜಾರಿಗೆ ತರಲು ಚಿಂತನೆ
ನಡೆಸಿದೆ.