ಬೆಂಗಳೂರು,ಸೆ.30- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಅಲ್ಲದೆ ಬಂಗಾಳಕೊಲ್ಲಿಯಲ್ಲಿ ನಾಳೆ ವೇಳೆಗೆ ವಾಯುಭಾರ ಕುಸಿತವೂ ಆಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆಗಳಿವೆ.
ನಿನ್ನೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ವ್ಯಾಪಕ ಮಳೆಯಾಗಿದೆ. ಪ್ರವಾಹ ಹಾಗೂ ಅತಿವೃಷ್ಟಿಗೆ ಒಳಗಾಗಿದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ.
ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಬಿಡುವು ಕೊಟ್ಟಿದ್ದರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಶಿವಮೊಗ್ಗ, ಯಾದಗಿರಿ, ಬಾಗಲಕೋಟೆ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಉಳಿದಂತೆ ಕೆಲವೆಡೆ ಮಾತ್ರ ಮಳೆಯಾಗಿದೆ.
ಬಂಗಾಳ ಉಪಸಾಗರದಲ್ಲಿ ನಾಳೆಯೊಳಗೆ ವಾಯುಭಾರ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮೇಲೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಇಂದು ಮತ್ತು ನಾಳೆ ಮಳೆಯಾಗಲಿದೆ. ಅ.2 ರಿಂದ 5 ರವರೆಗೆ ರಾಜ್ಯಾದ್ಯಂತ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇಂದಿನಿಂದ ಅ.5 ರವರೆಗೆ ಕೆಲವೆಡೆ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದ್ದಾರೆ.