Friday, April 25, 2025
Homeರಾಜ್ಯಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ದೇವೇಗೌಡರ ತೀವ್ರ ವಿರೋಧ

ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ದೇವೇಗೌಡರ ತೀವ್ರ ವಿರೋಧ

Deve Gowda strongly opposes the construction of a township in Bidadi Hobli area

ಬೆಂಗಳೂರು, ಏ.25– ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರ್‌ಗಳಲ್ಲಿರುವ ಸುಮಾರು 10 ಸಾವಿರ ಎಕರೆ ಜಮೀನನ್ನು ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ
ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ವರದಿಯಾಗಿದೆ ಎಂದಿದ್ದಾರೆ.

ರಾಮನಗರ ಜಿಲ್ಲೆಯ ರಾಮನಗರ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕೈಗಾರಿಕಾಭಿವೃದ್ಧಿಗಾಗಿ ಸಾವಿರಾರು ಎಕರೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕಾಭಿವೃದ್ಧಿ ಪ್ರದೇಶವನ್ನು ಸ್ಥಾಪಿಸಿದೆ. ರಾಮನಗರ ಜಿಲ್ಲೆ ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತಿದ್ದು ಹಲವಾರು ಉದ್ಯಮಿಗಳು ಖಾಸಗಿಯಾಗಿ ಕೈಗಾರಿಕೆಗಳನ್ನು
ಸ್ಥಾಪಿಸಿದ್ದಾರೆ ಎಂದು ಗೌಡರು ಹೇಳಿದ್ದಾರೆ.

ಉಳಿದಂತಿರುವ ಕೃಷಿ ಭೂಮಿಯಲ್ಲಿ ರೈತರು ತಮ್ಮ ಜೀವನ ನಿರ್ವಹಣೆಗೆ ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ಕೃಷಿಗಾಗಿ ಅವಲಂಬಿತರಾಗಿದ್ದಾರೆ. ಬಹುಪಾಲು ರೈತರು ಅತೀ ಸಣ್ಣ ಮತ್ತು ಸಣ್ಣ ಹಿಡುವಳಿದಾರರಾಗಿದ್ದು ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಮತ್ತು ಜಮೀನಿನ ಸುತ್ತ ಲಕ್ಷಾಂತರ ಮರ-ಗಿಡಗಳನ್ನು ಬೆಳೆಸಿದ್ದಾರೆ. ಇಂತಹ ಪ್ರದೇಶವನ್ನು ಟೌನ್‌ ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಂಡರೆ ಪರಿಸರಕ್ಕೆ ಅಪಾರ ಹಾನಿ ಉಂಟಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಸಾವಿರಾರು ಕುಟುಂಬಗಳ ಜೀವನ ನಿರ್ವಹಣೆಗೆ ಧಕ್ಕೆಯುಂಟಾಗಿ, ರೈತ ಕುಟುಂಬದ ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಾರೆ. ಈ ಬಡ ರೈತರ ಜೀವನೋಪಾಯಕ್ಕೆ ಕೃಷಿ ಭೂಮಿಯೇ ಆಧಾರವಾಗಿದೆ. ಇದಲ್ಲದೆ, ಕರ್ನಾಟಕ ಗೃಹಮಂಡಳಿ ಹಾಗೂ ಇತರ ಸರ್ಕಾರಿ ಪ್ರಾಧಿಕಾರಗಳು ರಾಮನಗರ ಜಿಲ್ಲೆಯ ಬಿಡದಿ ಸುತ್ತಮುತ್ತ ಹಲವಾರು ವಸತಿ ಯೋಜನೆಗಳನ್ನು ರೂಪಿಸಿ, ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್‌ಶಿಪ್ ಯೋಜನೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ರೈತರ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಬಡ ರೈತರ ಹಿತದೃಷ್ಟಿಯಿಂದ ಕೈಬಿಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

RELATED ARTICLES

Latest News