ನವದೆಹಲಿ, ಮಾ.10-ಕೆೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ವಿರುದ್ದ ಸದನದಲ್ಲಿ ಡಿಎಂಕೆ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಗದ್ದಲ ಉಂಟಾಗಿ ಲೋಕಸಭಾ ಕಲಾಪವನ್ನು ಸುಮಾರು 30 ನಿಮಿಷಗಳ ಕಾಲ ಮುಂದೂಡಲಾಯಿತು.
ತಮಿಳುನಾಡು ಸರ್ಕಾರವು ಅಪ್ರಾಮಾಣಿಕ ಮತ್ತು ರಾಜ್ಯದ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಪಡಿಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆಗೆ ಡಿಎಂಕೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನ್ ಶ್ರೀ ಯೋಜನೆಯ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಪ್ರಧಾನ್, ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರವು ,ಕೇಂದ್ರ, ರಾಜ್ಯ ಅಥವಾ ಸ್ಥಳೀಯ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಶಾಲೆಗಳನ್ನು ಬಲಪಡಿಸುವ ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ತನ್ನ ನಿಲುವನ್ನು ಬದಲಾಯಿಸಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಜಾರಿಗೆ ತರುವ ಬಗ್ಗೆ ಸಂಬಂಧಪಟ್ಟ ರಾಜ್ಯವು ಕೇಂದ್ರ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಬೇಕಾಗಿದೆ.ತಮಿಳುನಾಡು ಸರ್ಕಾರವು ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು. ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದಾರೆ. ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಅನೇಕ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಅವರು ಹೇಳಿದರು.
ಸಚಿವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಡಿಎಂಕೆ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತೀವ್ರ ಪ್ರತಿಭಟನೆ ನಡೆಸಿದರು.ಸಭಾಧ್ಯಕ್ಷ ಓಂ ಬಿರ್ಲಾ ಅವರು ಉದ್ರಿಕ್ತ ಸದಸ್ಯರು ತಮ ಸ್ಥಾನಗಳಿಗೆ ಮರಳುವಂತೆ ಮತ್ತು ಸದನವು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಕೇಳಿಕೊಂಡರು ಆದರೆ, ಡಿಎಂಕೆ ಸದಸ್ಯರು ಅವರ ಮನವಿಯನ್ನು ನಿರ್ಲಕ್ಷಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.ಸ್ಪೀಕರ್ ಓಂ ಬಿರ್ಲಾ ಅವರು ಸ್ವಲ್ಪ ಸಮಯದ ನಂತರ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು.