ಚಿಕ್ಕಮಗಳೂರು,ನ.7- ಕಳಸ ತಾಲೂಕಿನ ಸಂಸ್ಥೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರಣಕಾಡು ಗ್ರಾಮದಲ್ಲಿ ಸುಮಾರು 10 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಕಾಫಿ ತೋಟದಲ್ಲಿ ಕಾಣಿಸಿಕೊಂಡು ಕೆಲಕಾಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.
ಗ್ರಾಮದ ಅಣ್ಣುರತ್ನ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ತಕ್ಷಣವೇ ಅರಣ್ಯ ಇಲಾಖೆ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಲಾಗಿದ್ದು, ಸ್ಥಕ್ಕಾಗಮಿಸಿದ ಉರಗ ರಕ್ಷಕ ಸ್ನೇಕ್ ರಿಜ್ವಾನ್ ಕಾರ್ಯಾಚರಣೆ ನಡೆಸಿದರು.
ಅರಣ್ಯಾಧಿಕಾರಿಗಳ ಸಮುಖದಲ್ಲಿ ಅತ್ಯಂತ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿದ ಸ್ನೇಕ್ ರಿಜ್ವಾನ್, ಸುಮಾರು 10 ಅಡಿ ಉದ್ದದ ಹೆಬ್ಬಾವನ್ನು ಯಾವುದೇ ಅಪಾಯವಾಗದಂತೆ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.
ನಂತರ ಅರಣ್ಯ ಇಲಾಖೆ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಹೆಬ್ಬಾವನ್ನು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ದಟ್ಟ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡುಗಡೆ ಮಾಡಲಾಯಿತು. ಹೆಬ್ಬಾವಿಗೆ ಯಾವುದೇ ತೊಂದರೆಯಾಗದಂತೆ ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಉರಗ ರಕ್ಷಕ ಸ್ನೇಕ್ ರಿಜ್ವಾನ್ ಅವರ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
