ಚಿಕ್ಕಮಗಳೂರು,ಜು.8- ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ಅವರ ಮೇಲೆ ದಾಳಿ ನಡೆಸಿದೆ. ದಾಳಿಯ ವೇಳೆ ಕಾಡುಕೋಣ ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಬಲವಾಗಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಶೀಲಾ ಅವರನ್ನು ಸ್ಥಳೀಯರು ತಕ್ಷಣ ತೋಟದಿಂದ ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.
ಘಟನೆಯಿಂದ ಬಿಳಗುಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಪ್ರದೇಶಗಳ ಸಮೀಪ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
