Homeಜಿಲ್ಲಾ ಸುದ್ದಿಗಳುಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ರೈತರ ನಡೆಸುತ್ತಿದ್ದ ಪ್ರತಿಭಟನೆ ಅಂತ್ಯ

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ರೈತರ ನಡೆಸುತ್ತಿದ್ದ ಪ್ರತಿಭಟನೆ ಅಂತ್ಯ

ಬೇಲೂರು, ನ.16- ಕಾಡಾನೆ ದಾಳಿಗೆ ಜಯಮ ಬಲಿಯಾದ ಹಿನ್ನೆಲೆಯಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಚೌಡನಹಳ್ಳಿ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ನಿನ್ನೆ ಅಂತ್ಯಗೊಂಡಿತು.

ಜಯಮ ಅವರ ಮೃತದೇಹದೊಂದಿಗೆ ನೂರಾರು ರೈತರು ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಸ್ಥಳಕ್ಕೆ ಆಗಮಿಸಿದ ಸಂಸದ ಶ್ರೇಯಸ್‌‍ ಪಟೇಲ್‌‍, ಶಾಸಕ ಎಚ್‌.ಕೆ. ಸುರೇಶ್‌ ಹಾಗೂ ಜಿಲ್ಲಾಧಿಕಾರಿ ಕೆ.ಎಸ್‌‍. ಲತಾಕುಮಾರಿ ರೈತರ ಮನವೊಲಿಸಲು ಪ್ರಯತ್ನಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಶೀಘ್ರದಲ್ಲೇ ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.ಬೇಲೂರು ತಾಲೂಕಿನಲ್ಲಿ ಕಾಡಾನೆ ಸಮಸ್ಯೆಗೆ ಪರಿಹಾರವಾಗಿ ಎರಡು ತಿಂಗಳೊಳಗೆ ಎಲ್ಲಾ ಆನೆಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸಿ, ರೈಲ್ವೆ ಬ್ಯಾರಿಕೇಡ್‌ ಅಳವಡಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಮೃತ ಜಯಮ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರೂ. ಪರಿಹಾರದ ಚೆಕ್‌ ವಿತರಿಸಲಾಯಿತು. ಅಲ್ಲದೆ, ಅವರ ಪತಿಗೆ ಐದು ವರ್ಷಗಳ ಕಾಲ ಮಾಸಿಕ ನಾಲ್ಕು ಸಾವಿರ ರೂ. ಪಿಂಚಣಿ ನೀಡುವುದಾಗಿ ಭರವಸೆ ನೀಡಲಾಯಿತು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೇಲೂರು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಪ್ರತಿಭಟನೆಯಲ್ಲಿ ರೈತ ಮುಖಂಡ ಸ್ವಾಮಿಗೌಡ ಸೇರಿದಂತೆ ನೂರಾರು ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

RELATED ARTICLES

Latest News