ಹನೂರು,ನ.20- ತಾಲೂಕಿನ ಕಾವೇರಿ ವನ್ಯಧಾಮ ವಲರ ವ್ಯಾಪ್ತಿಯ ಕೊತ್ತನೂರು ವಲಯದ ಚಿಕ್ಕಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಸುಮಾರು 30 ವರ್ಷದ ಗಂಡಾನೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿಗೆ ಆನೆ ಮೃತಪಟ್ಟಿರುವುದು ಕಂಡುಬಂದಿದೆ. ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎಸಿಎಫ್ ಮರಿಸ್ವಾಮಿ ಹಾಗೂ ಅರಣ್ಯಾಧಿಕಾರಿ (ಆರ್ಎಫ್ಒ) ಸುಂದರ್ ಅವರು ಸ್ಥಳ ಪರಿಶೀಲನೆ ನಡೆಸಿದರು.
ಆನೆಯ ಮೃತದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ಅಲ್ಲದೆ ಬೇಟೆಗಾರರು ಬೇಟೆಯಾಡಿರುವ ಯಾವುದೇ ಕುರುಹುಗಳು ಕಂಡು ಬಾರದ ಹಿನ್ನೆಲೆಯಲ್ಲಿ ಆನೆಯು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದು ಬಂದಿದೆ.
ನಂತರ ಪಶು ವೈದ್ಯ ಡಾ. ಉಮಾಶಂಕರ್ ಅವರು ಸ್ಥಳಕ್ಕೆ ಆಗಮಿಸಿ ಆನೆಯ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದರು. ಮರಣೋತ್ತರ ಪರೀಕ್ಷೆ ಬಳಿಕ ನಿಯಮಾನುಸಾರ ಅರಣ್ಯ ಪ್ರದೇಶದಲ್ಲಿಯೇ ಆನೆಯ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಆನೆಗಳ ಸಾವು ಮುಂದುವರೆದಿದ್ದು, ಇದು ವನ್ಯ ಪ್ರೇಮಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆನೆಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
