ಹಾಸನ,ಫೆ.25- ಪಾರದರ್ಶಕ ಆಡಳಿತ ನೀಡುವ ಉದ್ದೇಶದಿಂದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯಗೊಳಿಸಿದೆ. ಆದರೆ ಹಾಸನ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರ ಛೇಂಬರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾವನ್ನು ಕಿತ್ತೆಸೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಿಬ್ಬಂದಿ ಸಿಸಿ ಕ್ಯಾಮೆರಾವನ್ನು ತೆಗೆದುಹಾಕುತ್ತಿರುವ ದೃಶ್ಯಗಳು ಮತ್ತೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮತ್ತೊಂದೆಡೆ ಕ್ಯಾಮೆರಾ ತೆರವು ದೃಶ್ಯಾವಳಿಗಳು ಹೇಗೆ ಬಹಿರಂಗವಾಯಿತು ಎಂಬುದರ ಬಗ್ಗೆಯೂ ಪ್ರಶ್ನೆಗಳು ಮೂಡಿವೆ.
ಪಾಲಿಕೆ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಆಯುಕ್ತರು ಸೇರಿ ಕಚೇರಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಭ್ರಷ್ಟಾಚಾರ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಇಂತಹ ಸಂದರ್ಭದಲ್ಲಿ ಸಿಸಿ ಕ್ಯಾಮೆರಾಗಳನ್ನು ತೆಗೆದು ಹಾಕಿರುವುದು ಸರ್ಕಾರದ ಆಸ್ತಿ ಹಾನಿಗೆ ಸಮಾನವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮಹಾನಗರ ಪಾಲಿಕೆಯ ಮ್ಯಾನೇಜರ್ ಅವರ ಛೇಂಬರ್‌ನಲ್ಲಿ ಅಳವಡಿಸಿದ್ದ ಕ್ಯಾಮೆರಾವನ್ನು ತೆರವುಗೊಳಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ.ಸರ್ಕಾರಿ ಕಚೇರಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿರುವಾಗ ಈ ರೀತಿಯ ಬೇಜವಾಬ್ದಾರಿ ವರ್ತನೆ ಆಡಳಿತದ ಪಾರದರ್ಶಕತೆಗೆ ಧಕ್ಕೆ ತರುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
