Homeಜಿಲ್ಲಾ ಸುದ್ದಿಗಳುಶಿವಮೊಗ್ಗದಲ್ಲಿ ಪೊಲೀಸರ ಗುಂಡಿನ ಸದ್ದು : ಕೊಲೆ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗದಲ್ಲಿ ಪೊಲೀಸರ ಗುಂಡಿನ ಸದ್ದು : ಕೊಲೆ ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರು, ಸೆ.7- ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಪೊಲೀಸರ ರಿವಾಲ್ವರ್‌ ಸದ್ದು ಮಾಡಿದ್ದು, ಕೊಲೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಗುಂಡೇಟು ಬಿದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ಉಮೇಶ್‌ (27) ಎಂಬಾತನನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆ ವೇಳೆ ಪೊಲೀಸ್‌ ಸಿಬ್ಬಂದಿ ತಮಣ್ಣ ಅವರಿಗೂ ಗಾಯವಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ಸಂಜೆ ರಾಮಿನಕೊಪ್ಪದಲ್ಲಿ ರೌಡಿಶೀಟರ್‌ ಕಿರಣ್‌ ಅಲಿಯಾಸ್‌ ಕುಳ್ಳಿ ಕಿರಣ್‌ ಎಂಬಾತನ ಮೇಲೆ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದರು. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

ಈ ಸಂಬಂಧ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದರು. ಈ ನಡುವೆ ಪ್ರಮುಖ ಆರೋಪಿ ಉಮೇಶ್‌ ಲಿಂಗಾಪುರ-ಎನ್‌.ಆರ್‌.ಪುರ ನಡುವಿನ ಪ್ರದೇಶದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಇನ್‌ಸ್ಪೆಕ್ಟರ್‌ ಗುರುರಾಜ್‌ ಅವರಿಗೆ ಮಾಹಿತಿ ಲಭ್ಯವಾಗಿತ್ತು.

ತಕ್ಷಣ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆಗೆ ಮುಂದಾದ ಇನ್‌ಸ್ಪೆಕ್ಟರ್‌ ಗುರುರಾಜ್‌ ಅವರು ಇಂದು ಬೆಳಗ್ಗೆ ಸುಮಾರು 6.30ರ ವೇಳೆಗೆ ಆರೋಪಿಯನ್ನು ಬಂಧಿಸಲು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸರನ್ನು ಕಂಡ ಉಮೇಶ್‌ ತಪ್ಪಿಸಿಕೊಳ್ಳುವ ಯತ್ನದಲ್ಲಿ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಪರಿಸ್ಥಿತಿ ನಿಯಂತ್ರಿಸಲು ಇನ್‌ಸ್ಪೆಕ್ಟರ್‌ ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರು. ಆದರೆ ಪೊಲೀಸರ ಎಚ್ಚರಿಕೆಗೆ ಕಿವಿಗೊಡದೆ ಉಮೇಶ್‌ ಸಿಬ್ಬಂದಿ ತಮಣ್ಣ ಅವರ ಮೇಲೆ ಹಲ್ಲೆ ನಡೆಸಲು ಮುಂದಾದಾಗ, ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ ಗುಂಡು ಹಾರಿಸಿದ್ದಾರೆ.

ಈ ವೇಳೆ ಗುಂಡು ಉಮೇಶ್‌ನ ಕಾಲಿಗೆ ತಗುಲಿ ಆತ ನೆಲಕ್ಕುರುಳಿದ್ದಾನೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಕೊಲೆಗೆ ಕಾರಣ ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.

RELATED ARTICLES
spot_img

Latest News