ತುಮಕೂರು,ಸೆ.16-ಹಿಟ್ ಅಂಡ್ ರನ್‌ಗೆ ನವ ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಸೇತುವೆ ಬಳಿ ನಡೆದಿದೆ. ಶಿರಾ ತಾಲ್ಲೂಕಿನ ಉಣಸೇಕಟ್ಟೆ ಗ್ರಾಮದ ಉಷಾರಾಣಿ (21),ದರ್ಶನ್ (25) ಮೃತಪಟ್ಟ ನವ ದಂಪತಿಗಳೆಂದು ತಿಳಿದು ಬಂದಿದೆ.
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ದ್ವಿಚಕ್ರ ವಾಹನದಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ದರ್ಶನ್ ಸ್ಥಳದಲ್ಲೇ ಸಾವನ್ನಪ್ಪಿದರೆ ಉಷಾರಾಣಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆ ಉಸಿರೆಳೆದಿದ್ದಾರೆ. ಈ ಸಂಬಂಧ ತಾವರೆಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಡಿಕ್ಕಿ ಹೊಡೆದ ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
