ಯಾದಗಿರಿ, ಆ.23- ಬೊಲೆರೊ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ ಬಳಿ ಕಳೆದ ರಾತ್ರಿ ನಡೆದಿದೆ.
ಮಡ್ನಾಳ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು, ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಎಂಟು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ತಿಳಿದು ಭೀಮರಾಯನಗುಡಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
