ಬೆಂಗಳೂರು,ಆ.22- ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಅರ್ಧದಲ್ಲೇ ಎದ್ದು ಹೊರಬಂದಿದ್ದು, ಲೋಕಾಯುಕ್ತ ಕಚೇರಿಗೆ ತೆರಳಿ ಹೇಳಿಕೆ ನೀಡಿದ್ದಾರೆ.
ಡಿವೈಎಸ್ಪಿ ಸತೀಶ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಈ ಹಿಂದೆ ಯಡಿಯೂರಪ್ಪ ಅವರ ಸರ್ಕಾರ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆ ಹಿಂಪಡೆದಿತ್ತು.
ಬಳಿಕ ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಆರೋಪವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಸಿಬಿಐ ರಾಜ್ಯಸರ್ಕಾರದ ನಿರ್ಣಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಈಗಾಗಲೇ ಶೇ.90 ರಷ್ಟು ತನಿಖೆ ಪೂರ್ಣಗೊಂಡಿದೆ. ಈ ಹಂತದಲ್ಲಿ ಅನುಮತಿ ಹಿಂಪಡೆದಿರುವುದು ಸೂಕ್ತವಲ್ಲ ಎಂಬುದು ಸಿಬಿಐ ವಾದವಾಗಿತ್ತು. ನ್ಯಾಯಾಲಯ ಯಾವುದೇ ನಿರ್ದೇಶನ ನೀಡಿರಲಿಲ್ಲ.
ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಲೋಕಾಯುಕ್ತ ತನಿಖೆಗೆ ಆದೇಶಿಸಲಾಗಿದೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತದಲ್ಲಿ ತನಿಖೆ ಚುರುಕುಗೊಂಡಿದ್ದು, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ದಾಖಲು ಮಾಡಿಕೊಂಡಿರುವುದು ಮಹತ್ವದ ಬೆಳವಣಿಗೆಯಾಗಿದೆ.