ಬೆಂಗಳೂರು,ಅ.19- ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ ನಡೆಸಿದ್ದಾರೆ. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿರುವ ತಮ ಕಾಲೇಜಿನ ಸಭಾಂಗಣದಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿರುವ ಅವರು, ಅಭ್ಯರ್ಥಿ ಯಾರಾಗಬೇಕೆಂದು ಮಾಹಿತಿ ಕಲೆ ಹಾಕಿದ್ದಾರೆ ಮತ್ತು ತಮ ಆಲೋಚನೆಯಲ್ಲಿರುವ ಅಭ್ಯರ್ಥಿಯ ಹೆಸರನ್ನು ಸಭೆಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭೆ ಉಪಚುನಾವಣೆಯ ವೇಳಾಪಟ್ಟಿ ಘೋಷಣೆಯಲ್ಲಿ ಅಧಿಸೂಚನೆಯು ಆರಂಭಗೊಂಡಿದೆ. ಈವರೆಗೂ ಮೂರು ಪಕ್ಷಗಳು ಅಭ್ಯರ್ಥಿಗಳ ಕುರಿತು ವಿವರವನ್ನು ಬಹಿರಂಗಪಡಿಸಿಲ್ಲ. ಆಡಳಿತಾರೂಢ ಕಾಂಗ್ರೆಸ್ ಜೆಡಿಎಸ್-ಬಿಜೆಪಿಯ ಮೈತ್ರಿಪಕ್ಷವನ್ನು ಎದುರಿಸಬೇಕಿದೆ.
ಈ ಹಿನ್ನೆಲೆಯಲ್ಲಿ ಪ್ರಭಲ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕಾಂಗ್ರೆಸ್ ತಯಾರಿ ನಡೆಸಿದೆ. ಪ್ರತಿಯೊಬ್ಬರ ಜೊತೆಗೂ ಸಭೆ ನಡೆಸಿ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಮಾಜಿ ಸಂಸದ ಬಿ.ಕೆ.ಸುರೇಶ್ ಅವರೇ ಅಭ್ಯರ್ಥಿಯಾಗುತ್ತಾರೆ ಎಂಬ ವದಂತಿಗಳ ನಡುವೆ ಹಲವು ಮಂದಿ ಹೆಸರುಗಳು ಚಾಲನೆಗೆ ಬಂದಿವೆ. ತಮ ಕುಟುಂಬದಿಂದ ಯಾರನ್ನೂ ಕಣಕ್ಕಿಳಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ.
ಹಿಂದಿನ ಸಭೆಯಲ್ಲಿ ಕ್ಷೇತ್ರದ ಪ್ರಮುಖರು ಡಿ.ಕೆ.ಸುರೇಶ್ ಅವರನ್ನೇ ಕಣಕ್ಕಿಳಿಸಬೇಕು. ಇಲ್ಲವಾದರೆ ಉಪಚುನಾವಣೆ ನಡೆಸುವುದು ಕಷ್ಟ ಎಂಬ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.ಇದರ ನಡುವೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.