Saturday, April 27, 2024
Homeರಾಜಕೀಯಸಹೋದರನ ಸಮಾಜಸೇವೆಯನ್ನು ಕೊಂಡಾಡಿದ ಡಿಕೆಶಿ

ಸಹೋದರನ ಸಮಾಜಸೇವೆಯನ್ನು ಕೊಂಡಾಡಿದ ಡಿಕೆಶಿ

ಬೆಂಗಳೂರು,ಮಾ.28- ಸಹೋದರ ಡಿ.ಕೆ.ಸುರೇಶ ಅವರ ಸಮಾಜ ಸೇವೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೊಂಡಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದರು.

ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ.ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು.

ಎಲ್ಲಾ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೊಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ ಎಂದರು. ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯದಲ್ಲಿ ದುರ್ಬಲವಾಗಿದೆ :
ಬಿಜೆಪಿ ರಾಜ್ಯದಲ್ಲಿ ದುರ್ಬಲವಾಗಿದೆ. ಅದಕ್ಕಾಗಿ ಕೇಂದ್ರ ಸಚಿವರೂ ಸೇರಿದಂತೆ 10 ಮಂದಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.’

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ರಾಜ್ಯ ನಾಯಕರು ಎಂದು ಪರಿಗಣಿಸಿ ಟಿಕೆಟ್ ನೀಡಿದಂತಿದೆ. ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ, ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ ಎಂದರು.

ಬಿಜೆಪಿ ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆ ಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು. ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‍ನ ಸಂಸದೀಯ ಪಕ್ಷದ ಅಧ್ಯಕ್ಷ ಸೋನಿಯಾಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ.

ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ ಖರ್ಗೆಯವರು 2-3 ದಿನ, ಗಾಂಧಿ ಕುಟುಂಬದ ನಾಯಕರು ಒಂದೊಂದು ದಿನ ಸಮಯ ಕೊಟ್ಟರೆ ಸಾಕು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳು ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೆವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ರ್ಪಧಿಸಿ ಗೆದ್ದಿದ್ದೇನೆ.

2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

RELATED ARTICLES

Latest News