ಬೆಂಗಳೂರು, ಜೂ.24– ಉಪಚುನಾವಣೆ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಡಿ.ಕೆ. ಸಹೋದರರಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ನಿಂತು ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಪಡೆ ಹವಣಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಯಾರು ಎಂಬ ಸುಳಿವನ್ನೂ ಕಾಂಗ್ರೆಸ್ ಬಿಟ್ಟುಕೊಟ್ಟಿಲ್ಲ.
ಕಳೆದ ಒಂದು ವಾರದಲ್ಲಿ ಡಿ.ಕೆ.ಶಿವಕುಮಾರ್‌ರವರು ಎರಡನೇ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ವಾರ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್‌ರವರು ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.
ಇಂದು ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದು, ಜನಸ್ಪಂದನ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ಜನಸ್ಪಂದನ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಒತ್ತು ನೀಡಿದ್ದರು. ಬೆಂಗಳೂರಿನಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜನಸ್ಪಂದನ ಕಾರ್ಯಕ್ರಮಗಳು ಸರಣಿಯಾಗಿ ನಡೆದಿದ್ದವು. ನೀತಿ ಸಂಹಿತೆ ಹಿನ್ನೆಲೆಯಲಿ ಕಳೆದ ಮೂರು ತಿಂಗಳಿನಿಂದಲೂ ಜನಸ್ಪಂದನ ನಡೆದಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸುವ ಜನಸ್ಪಂದನವೂ ಸ್ಥಗಿತಗೊಂಡಿತ್ತು.
ಚುನಾವಣಾ ಪ್ರಕ್ರಿಯೆ ಸ್ಥಗಿತಗೊಂಡ ಬಳಿಕ ಮೊಟ್ಟಮೊದಲನೆಯದಾಗಿ ಡಿ.ಕೆ.ಶಿವಕುಮಾರ್‌ರವರು ಚನ್ನಪಟ್ಟಣದಿಂದಲೇ ಜನಸ್ಪಂದನವನ್ನು ಆರಂಭಿಸಿದ್ದಾರೆ.ಈ ಮೂಲಕ ಮುಂದೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂಬ ಹಠಕ್ಕೆ ಬಿದ್ದಿರುವುದು ಸ್ಪಷ್ಟವಾಗುತ್ತಿದೆ.
ಉಪಚುನಾವಣೆಯಲ್ಲಿ ಅಭ್ಯರ್ಥಿಯ ವಿಷಯವಾಗಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಒಂದು ಹಂತದಲ್ಲಿ ಡಿ.ಕೆ.ಶಿವಕುಮಾರ್‌ರವರು ತಾವೇ ಅಭ್ಯರ್ಥಿಯಾಗುವುದಾಗಿ ಹೇಳುವ ಮೂಲಕ ರಾಜಕೀಯವಾಗಿ ತೀರಾ ಕುತೂಹಲ ಕೆರಳಿಸಿದ್ದರು.
ನಂತರದ ದಿನಗಳಲ್ಲಿ ತಮ ಹೇಳಿಕೆಯನ್ನು ಬದಲಾವಣೆ ಮಾಡಿದ್ದು, ಯಾರೇ ಸ್ಪರ್ಧೆ ಮಾಡಿದರೂ ನಾನೇ ಅಭ್ಯರ್ಥಿ ಎಂದು ಹೇಳುವ ಮೂಲಕ ಕ್ಷೇತ್ರವನ್ನು ಎಷ್ಟರ ಮಟ್ಟಿಗೆ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂಬುದರ ಮುನ್ಸೂಚನೆ ನೀಡಿದರು.
ಮೂಲಗಳ ಪ್ರಕಾರ, ಮಾಜಿ ಸಂಸದ ಡಿ.ಕೆ.ಸುರೇಶ್ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಕೂಡ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸಿದೆ.ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಈಗಾಗಲೇ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಮತ್ತೆ ಅವರೇ ಸ್ಪರ್ಧೆ ಮಾಡುವ ಬಗ್ಗೆ ನಾನಾ ರೀತಿಯ ವ್ಯಾಖ್ಯಾನಗಳು ನಡೆಯುತ್ತಿವೆ.