ಅಧಿವೇಶನಕ್ಕೂ ಮುನ್ನ ಬರ ಪೀಡಿತ ಪ್ರದೇಶಗಳ ಘೋಷಣೆ ಸಾಧ್ಯತೆ

ಬೆಂಗಳೂರು :  ರಾಜ್ಯ ವಿಧಾನ ಮಂಡಲದ ಅಧಿವೇಶನಕ್ಕೂ ಮುನ್ನ ಬರಪೀಡಿತ ತಾಲ್ಲೂಕುಗಳ ಘೋಷಣೆ ಮಾಡುವ ಸಾಧ್ಯತೆ ಇದೆ.  ಜೂನ್‍ನಿಂದ ಸೆಪ್ಟೆಂಬರ್ ಅಂತ್ಯದವರೆಗೆ ಮುಂಗಾರು ಹಂಗಾಮಿನಲ್ಲಿ ಬಿದ್ದ ಮಳೆ ಪ್ರಮಾಣ, ಬಿತ್ತನೆ, ಬೆಳೆ ನಷ್ಟ, ಅಂತರ್ಜಲದ ಪ್ರಮಾಣ ಮೊದಲಾದ ಮಾಹಿತಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಬರ ಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಅಕ್ಟೋಬರ್ 10ರಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಬರ ಪೀಡಿತ ಪ್ರದೇಶಗಳನ್ನು ಗುರುತಿಸಲಾಗುತ್ತದೆ. ಸುಮಾರು 30 ತಾಲ್ಲೂಕುಗಳು ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಳೆದ ಎಂಟತ್ತು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿ ರುವುದರಿಂದ ಕೆಲವು ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜೂನ್‍ನಿಂದ ಸೆಪ್ಟೆಂಬರ್‍ವರೆಗಿನ ಸರಾಸರಿ ಮಳೆ ಪ್ರಮಾಣವನ್ನು ಪರಿಗಣಿಸಿದಾಗ ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಕಂಡುಬರುತ್ತಿದೆ. ಇದರಿಂದ ಬರ ಪೀಡಿತ ಪ್ರದೇಶಗಳನ್ನು ಗುರುತಿಸಲು ಕಷ್ಟವಾಗುತ್ತದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ರಾಜ್ಯದ ಪೂರ್ವಭಾಗ ಮತ್ತು ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡುಬಂದಿದೆ.

ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯೂ ಆಗಿಲ್ಲ. ಬಿತ್ತಿದ ಬೆಳೆಗಳು ಕೂಡ ಒಣಗಿವೆ. ಹೀಗಾಗಿ ಬರ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಬೇಕೆಂಬ ಒತ್ತಾಯವನ್ನು ವಿರೋಧ ಪಕ್ಷಗಳು ಮಾಡಿವೆ.ಕಂದಾಯ ಇಲಾಖೆ ಜೂನ್‍ನಿಂದ ಸೆಪ್ಟೆಂಬರ್‍ವರೆಗಿನ ಮಾಹಿತಿಯನ್ನು ಕಲೆ ಹಾಕಿ ಬರ ಪೀಡಿತ ತಾಲ್ಲೂಕುಗಳ ಘೋಷಣೆಗೆ ಸಿದ್ಧತೆ ನಡೆಸಿದೆ.

ಸೆ.9ರಂದು ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಅಂದು ಬರ  ಪೀಡಿತ ಪ್ರದೇಶಗಳನ್ನು ಗುರುತಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮೂಲಗಳು ತಿಳಿಸಿವೆ.