ನವದೆಹಲಿ, ಏ.22- ಕರ್ನಾಟಕ ರಾಜ್ಯಕ್ಕೆ ಬರ ನಿರ್ವಹಣೆ ಅನುದಾನ ಪಾವತಿ ವಿಚಾರವಾಗಿ ಒಂದು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟಂತಹ ಪೂರ್ವಾನುಮತಿಗಳನ್ನು ಚುನಾವಣಾ ಆಯೋಗಗಳಿಂದ ಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದು, ರಾಜ್ಯಸರ್ಕಾರದ ಕಾನೂನು ಸಮರಕ್ಕೆ ಜಯ ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ 223ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಪರಿಹಾರ ನೀಡುವಂತೆ ಕಳೆದ ಸೆಪ್ಟೆಂಬರ್ನಲ್ಲಿ ರಾಜ್ಯಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ 17,400 ಕೋಟಿ ರೂ.ಗಳ ಆರ್ಥಿಕ ನೆರವಿಗೆ ಮನವಿ ಮಾಡಿತ್ತು. ಕಂದಾಯ ಸಚಿವ ಕೃಷ್ಣಭೈರೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಲವು ಬಾರಿ ದೆಹಲಿಗೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಡಿಸೆಂಬರ್ನಲ್ಲಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದರು. ಆದರೂ ರಾಜ್ಯಕ್ಕೆ ಯಾವ ಆರ್ಥಿಕ ನೆರವೂ ದೊರೆಯಲಿಲ್ಲ.
ಕೊನೆಗೆ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯದ ಎದುರು ಕೇಂದ್ರ ಸರ್ಕಾರ ಹೇಳಿಕೆ ನೀಡಿದ್ದು, ಒಂದು ವಾರದೊಳಗಾಗಿ ಬರ ನಿರ್ವಹಣೆಯ ಅನುದಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವರು, ದೇಶದ ಇತಿಹಾಸದಲ್ಲೇ ಇಂತಹ ಸಂದರ್ಭಗಳು ಒದಗಿಬಂದಿರಲಿಲ್ಲ. ನಿಯಮಾನುಸಾರ ರಾಜ್ಯದ ಜನರಿಗೆ ದೊರೆಯಬೇಕಾಗಿದ್ದ ಪರಿಹಾರಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಪ್ರಕರಣ ಒಂದು ಹಂತಕ್ಕೆ ಬಂದಿದೆ. ಕೇಂದ್ರ ಸರ್ಕಾರ ಒತ್ತಡಕ್ಕೆ ಮಣಿದು ತನ್ನ ಅಭಿಪ್ರಾಯವನ್ನು ತಿಳಿಸಿದೆ. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ಗೆ ಧನ್ಯವಾದ ಎಂದಿದ್ದಾರೆ.