Monday, June 17, 2024
Homeರಾಜ್ಯಕೇಂದ್ರದಿಂದ ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಕೇಂದ್ರದಿಂದ ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ

ನವದೆಹಲಿ,ಏ.27- ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ ಡಿಆರ್‌ಎಫ್‌) ಯಡಿ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಉಂಟಾಗಿದ್ದ ಹಾನಿಯ ಅಂದಾಜನ್ನು ನಡೆಸಿದ್ದ ರಾಜ್ಯ ಸರ್ಕಾರ 18,174 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು.

ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಇದರಿಂದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಗೆಲುವು ಸಿಕ್ಕಂತಾಗಿದೆ. ಕರ್ನಾಟಕದ ಜೊತೆಗೆ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಕೂಡ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್‌ ಮೆಟ್ಟಲೇರಿದ್ದವು. ಪ್ರಕೃತಿ ವಿಕೋಪದಲ್ಲಾದ ಪರಿಹಾರವಾಗಿ ತಮಿಳುನಾಡಿಗೆ 276.10 ಕೋಟಿ ರೂ. ಬಿಡುಗಡೆ ಮಾಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವಾಗಿ ಏ. 29ರೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಲು ಚುನಾವಣಾ ಆಯೋಗವೂ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದೆ.

ಸಂಕಷ್ಟಕ್ಕೆ ತುತ್ತಾದ ಜನರಿಗೆ ಬರ ಪರಿಹಾರ ವಿತರಣೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆಗೆ ತ್ವರಿತ ನಿರ್ಧಾರ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೆಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

ಸಂವಿಧಾನಬದ್ದವಾಗಿ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕಿದ್ದ ಬರ ಪರಿಹಾರವನ್ನು ಬಿಡುಗಡೆ ಮಾಡದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತೀವ್ರ ಬರದಿಂದ ಕಂಗೆಟ್ಟಿರುವ ಕರ್ನಾಟಕದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್‌ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಕೇಂದ್ರಸರ್ಕಾರವು ಪರಿಹಾರ ಬಿಡುಗಡೆ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಸದ್ಯ ಪ್ರಕರಣದ ವಿಚಾರಣೆ ಏ.29ಕ್ಕೆ ನಡೆಯಲಿದೆ.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿ ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು.

ಕರ್ನಾಟಕದ ವಾದವೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.

ಹೀಗಾಗಿ ಶೀಘ್ರವೇ 18,174 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.

ಜೊತೆಗೆ ಎನ್‌ಡಿಆರ್‌ಎಫ್‌ನಿಂದ 4663 ಕೋಟಿ ರೂ. ಇನ್ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫೂಟ್ಸ್‌‍ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ.

ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು.

ರಾಜ್ಯ ಗಂಭೀರ ಮಾನವೀಯ ಸಂಕಷ್ಟ, ವಿಪತ್ತು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬರ ಪರಿಹಾರಕ್ಕಾಗಿ 35,162 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಪ್ರಕಾರ, ಬರಗಾಲದ ಹಣಕಾಸಿನ ನೆರವು ಬಿಡುಗಡೆ ಮಾಡದಿರುವ ಕೇಂದ್ರ ಸರ್ಕಾರದ ಕ್ರಮವು ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂಬುದು ಕರ್ನಾಟಕ ವಾದವಾಗಿತ್ತು.

ತನ್ನ ಪಾಲಿನ ಬರ ಪರಿಹಾರ ಕೊಡಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿತ್ತು.

RELATED ARTICLES

Latest News