ಬೆಂಗಳೂರು,ಅ.21- ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಸೋಲಿನ ರುಚಿ ತೋರಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕಮಲ-ದಳ ನಾಯಕರ ಮೈತ್ರಿಗೆ ವಿರೋಧಿಸಿ ಸಂಸದ ಡಿ.ವಿ.ಸದಾನಂದಗೌಡ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಇದೇ ತಿಂಗಳ 25ರಂದು ದೆಹಲಿಗೆ ಬಂದು ಭೇಟಿ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚಿಸಿದ್ದಾರೆಂದು ತಿಳಿದು ಬಂದಿದೆ. ಹೀಗಾಗಿ ದೆಹಲಿಗೆ ತೆರಳುವ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋಲು ಕಂಡಿದೆ. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಠಕ್ಕರ್ ನೀಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಡಿ.ವಿ.ಸದಾನಂದ ಗೌಡರು, ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದರು.
ಛತ್ತೀಸ್‍ಗಢದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ
2024ರ ಲೋಕಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟೇ ಅವರೇ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಅಸಮಾಧಾನಗೊಂಡಿದ್ದರು.
ಈಗಾಗಲೇ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಸದಾನಂದಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರಾ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಈ ಚರ್ಚೆಯ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಡಿ ವಿ.ಸದಾನಂದಗೌಡ ಅವರ ಅಸಮಾಧಾನವನ್ನು ಶಮನಗೊಳಿಸಲು ದೆಹಲಿಗೆ ಬುಲಾವ್ ನೀಡಿದೆ.
ಇನ್ನು ಬಿಜೆಪಿಯಲ್ಲಿ 12 ಮಂದಿ ಸಂಸದರಿಗೆ ಈ ಬಾರಿ ಟಿಕೆಟ್ ಕೈತಪ್ಪಲಿದೆ ಎಂಬ ವರದಿಯಾಗಿದ್ದು, ಈ 12 ಸಂಸದರ ಪೈಕಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದಗೌಡ ಅವರಿಗೆ ಈ ಬಾರೀ ಟಿಕೆಟ್ ಕೈ ತಪ್ಪಲಿದೆ ಎನ್ನಲಾಗಿದೆ.
ಆದಾಗ್ಯೂ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರುವ ಸದಾನಂದ ಗೌಡರು ಬಿಜೆಪಿಯ ಪ್ರತಿಭಟನೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಸಾಲು ಸಾಲು ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದಾರೆ.