ಯಂಗ್ ಇಂಡಿಯಾ ಪ್ರಕರಣದಲ್ಲಿ ಡಿಕೆಶಿಗೆ ಇಡಿ ನೋಟಿಸ್

Social Share

ಮೈಸೂರು,ಅ.2- ಯಂಗ್ ಇಂಡಿಯ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಹೊರತಾಗಿ ಯಂಗ್ ಇಂಡಿಯಾ ಪ್ರಕರಣದಲ್ಲೂ ತಮಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

ಯಂಗ್ ಇಂಡಿಯಾ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಇದೇ ಪ್ರಕರಣದಲ್ಲಿ ಈಗ ತಮಗೂ ನೋಟಿಸ್ ನೀಡಿದೆ.

ನಾನು ಮತ್ತು ನನ್ನ ಸಹೋದರ ಸಂಸದ ಡಿ.ಕೆ.ಸುರೇಶ್ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದೇವೆ. ಈ ಹಂತದಲ್ಲಿ ಸಮನ್ಸ್ ಬಂದಿದೆ. ನಾನು ಎರಡು ದಿನಗಳ ಕಾಲಾವಕಾಶ ಕೇಳಿದ್ದೇನೆ. ಇಲ್ಲಿ ಯಾತ್ರೆಗೆ ಸಂಬಂಧಪಟ್ಟಂತ ತಯಾರಿಗಳ ಉಸ್ತುವಾರಿ ನೋಡಿಕೊಳ್ಳಬೇಕಿದೆ. ನಮ್ಮ ಪರಿಸ್ಥಿತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬಹುದು ಎಂಬ ವಿಶ್ವಾಸವಿದೆ ಎಂದರು.

ತನಿಖೆಗೆ ನಾನು ಸಹಕರಿಸುತ್ತೇನೆ. ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸ್ಪಷ್ಪಪಡಿಸಿದರು.
ಕಾಂಗ್ರೆಸ್ ಪಕ್ಷದ ನಾಯಕರು ಜಾಮೀನಿನ ಮೇಲೆ ಇದ್ದಾರೆ ಎಂಬ ಮುಖ್ಯಮಂತ್ರಿಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಹೌದು ನಾನು ಬೇಲ್ ಮೇಲೆ ಇದ್ದೇನೆ. ಸೋನಿಯಾಗಾಂಧಿ, ರಾಹುಲ್ ಗಾಂಧಿಯವರು ಜಾಮೀನಿನ ಮೇಲೆ ಇದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಅವರು ಜಾಮೀನಿನ ಮೇಲಿಲ್ಲವೇ ಎಂದು ಪ್ರಶ್ನಿಸಿದರು.

ಬೊಮ್ಮಾಯಿ ಅವರು ನನ್ನ ವಿರುದ್ಧ ಪ್ರಕರಣ ದಾಖಲಿಸಿದರು ಅದೇ ರೀತಿ ನನ್ನನ್ನು ಬಂಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿ ಕೆಲ ಕಾಲ ನಾನು ವಿಶ್ರಾಂತಿ ಪಡೆಯಬೇಕಿದೆ ಎಂದು ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ಹೇಳಿದರು.

Articles You Might Like

Share This Article