ಬೆಂಗಳೂರು,ಆ.13– ಕಾನೂನು ಬಾಹಿರವಾಗಿ ವಿದೇಶಕ್ಕೆ ಅದಿರು ರಪ್ತು ಮಾಡಿದ ಪ್ರಕರಣದಲ್ಲಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿನಿದೇರ್ಶನಾಲಯ(ಇಡಿ)ದ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನೊಂದು ಮೂಲದ ಪ್ರಕಾರ ಅದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಸತೀಶ್ ಸೈಲ್ ಕುಟುಂಬದ ಮೇಲೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಇದನ್ನು ಯಾರೊಬ್ಬರೂ ಈವರೆಗೂ ಅಧಿಕೃತವಾಗಿ ದೃಢಪಡಿಸಿಲ್ಲ.
ಇನ್ನು ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಸತೀಶ್ ಸೈಲ್ ಮನೆಯಲ್ಲಿ ಇರಲಿಲ್ಲ. ಬೆಂಗಳೂರಿನಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿರುವ ಕಾರಣ ಅವರು ಇಲ್ಲಿಗೆ ಬಂದಿದ್ದರು.
ಕಾರವಾರದ ಸದಾಶಿವಘಡದಲ್ಲಿರುವ ಸೈಲ್ ಅವರ ನಿವಾಸದ ಮೇಲೆ ಕೇಶವ್‌ರಾವ್ ಎಂಬ ಅಧಿಕಾರಿಯ ನೇತೃತ್ವದಲ್ಲಿ 24 ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆಕೆಲವು ದಾಖಲೆಗಳು ಲಭ್ಯವಾಗಿದ್ದು, ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ನಡೆಸಿದ ತಂಡದಲ್ಲಿ ಸುಮಾರು 6ರಿಂದ 7 ಇ.ಡಿ ಅಧಿಕಾರಿಗಳು ಇದ್ದರು ಎನ್ನಲಾಗಿದೆ.ಅವರೊಂದಿಗೆ ಇಬ್ಬರು ಅರೆಮಿಲಿಟರಿ ಸಿಬ್ಬಂದಿ ಸಹ ಸೇರಿದ್ದರು.
ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್‌ನಲ್ಲಿ ಜಾಮೀನು ಪಡೆದುಕೊಂಡಿದ್ದರು.
ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.
ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಿದ್ದರು. ನವೆಂಬರ್ನಲ್ಲಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್‌ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡ ಮೊತ್ತದ ಶೇ 25 ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸೈಲ್‌ಗೆ ಜಾಮೀನು ನೀಡಿತ್ತು.
ಏನಿದು ಪ್ರಕರಣ?
ಅಕ್ರಮ ಗಣಿಗಾರಿಕೆ ಮೂಲಕ ವಿದೇಶಕ್ಕೆ ಸಾಗಿಸಲು ಕಾರವಾರದ ಬೇಲೆಕೇರಿ ಬಂದರಿಯಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ಸಂಗ್ರಹಿಸಲಾಗಿತ್ತು. ಇದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದರು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಅವರು ಇದನ್ನು ವಿದೇಶಕ್ಕೆ ಸಾಗಣೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕ 6 ಪ್ರಕರಣಗಳು ದಾಖಲಾಗಿದ್ದವು. ಲೋಕಾಯುಕ್ತ ಮತ್ತು ಸಿಬಿಐ ತನಿಖೆ ನಡೆಸಿ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಿದ್ದವು. ಅರಣ್ಯಾಧಿಕಾರಿಗಳು ವಶಪಡಿಸಿಕೊಂಡ 5,00,000 ಮೆಟ್ರಿಕ್ ಟನ್ ಅದಿರಿನ ಪೈಕಿ 1,29,553.54 ಮೆಟ್ರಿಕ್ ಟನ್ ಅದಿರು ಕಳ್ಳತನವಾಗಿದೆ ಎಂದು ಸಿಬಿಐ ಹೇಳಿತ್ತು.
ಬೆಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.