ಬೆಂಗಳೂರು,ಮೇ 21- ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆದಿರುವುದಕ್ಕೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ವಿಧಾನಸೌಧದ ಬಳಿಯಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಇ.ಡಿ ದಾಳಿಯ ಬಗ್ಗೆ ಗೊತ್ತಿಲ್ಲ.
ಗೊತ್ತಿಲ್ಲದ ವಿಚಾರದ ಬಗ್ಗೆ ಕೇಳಿದರೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಗರಂ ಆಗಿದ್ದಲ್ಲದೆ ವಿಷಯ ತಿಳಿದು ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದರು.ಮತ್ತೊಂದೆಡೆ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ ಗೃಹಸಚಿವರು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಪರಮೇಶ್ವರ್ ಅವರು ಅತ್ಯಂತ ಸಭ್ಯ ಮತ್ತು ಸರಳ ವ್ಯಕ್ತಿ. ಅವರು ಇಂತಹ ಪ್ರಕರಣಗಳಲ್ಲೆಲ್ಲಾ ತೊಡಗಿಸಿಕೊಳ್ಳುವುದಿಲ್ಲ ಎಂಬ ಖಚಿತ ವಿಶ್ವಾಸ ನನಗಿದೆ ಎಂದು ತಿಳಿಸಿದರು.