ಪಾವಗಡ,ಸೆ.16-ನಕ್ಸಲ್ ಹೆಸರಿನಲ್ಲಿ ಪಾವಗಡ ಜನತೆಗೆ ಬೆದರಿಕೆ ಹಾಕುತ್ತಾ ಬೆಟ್ಟದಲ್ಲಿ ಅಡಗಿ ಕುಳಿತಿದ್ದ ಕನಕಲಬಂಡೆ ವೆಂಕಟೇಶ್ ಅಲಿಯಾಸ್ ಸ್ಯೂಡೋ ನಕ್ಸಲ್ ವೆಂಕಟೇಶ್ ಎಂಬಾತನನ್ನು ಪೊಲೀಸರು ಕೊನೆಗೂ ಡ್ರೋನ್ ಸಹಾಯದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಈತ ಪೊಲೀಸರಿಗೆ ಹಾಗೂ ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದ್ದ. ಈತನ ಬಂಧನಕ್ಕಾಗಿ ಪೊಲೀಸರು ಹಗಲಿರುಳು ಕಾರ್ಯಾಚರಣೆ ನಡೆಸುತ್ತಿದ್ದರು.
ಪಾವಗಡ ಸಮೀಪದ ಕಡಮಲಕುಂಟೆ ಬೆಟ್ಟದ ತಪ್ಪಲಿನಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಅರೆಬೆತ್ತಲಲ್ಲಿ ಕುಳಿತು ಮದ್ಯ,ಚಿಕನ್ ಸೇವಿಸುತ್ತಿದ್ದ ವೇಳೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಆರೋಪಿ ಕಳೆದ ಕೆಲ ತಿಂಗಳಿಂದ ಕನಕಲಬಂಡೆ ಗ್ರಾಮದಲ್ಲಿ ನಕ್ಸಲರ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿ ಸುಲಿಗೆ ಮಾಡುತ್ತಿದ್ದನಲ್ಲದೇ ದೌರ್ಜನ್ಯ ಹಾಗೂ ಬೆದರಿಕೆ ಹಾಕುತ್ತಿದ್ದ ಆರೋಪ ಎದುರಿಸುತ್ತಿದ್ದಾನೆ.ಆ.29ರಂದು ರೈತ ಕರಿಯಣ್ಣ ಅವರ ಪಂಪ್‌ಸೆಟ್‌ಗೆ ನಾಡಬಾಂಬ್ ಇಟ್ಟು ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲೂ ಈತನ ಹೆಸರು ಕೇಳಿಬಂದಿದೆ.
ಇತ್ತೀಚೆಗೆ ಗಂಗಸಾಗರ ಗ್ರಾಮದ ರೈತನಿಗೆ ಪೀಪಲ್ಸ್ ವಾರ್ ದಳಂ ಹೆಸರಿನಲ್ಲಿ 5 ಲಕ್ಷ ರೂ.ಗೆ ಬೇಡಿಕೆ ಪತ್ರ ಅಂಟಿಸಿದ ಪ್ರಕರಣದಲ್ಲೂ ಈತನ ಕೈವಾಡವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.
ಅಡಿಷನಲ್ ಎಸ್‌ಪಿ ಗೋಪಾಲಯ್ಯ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮಂಜುನಾಥ್ ನೇತತ್ವದಲ್ಲಿ ಇನ್‌್ಸಪೆಕ್ಟರ್ ಸುರೇಶ್, ಗ್ರಾಮಾಂತರ ಇನ್ಸ್ ಪೆಕ್ಟರ್ ಕೊಟ್ರೇಶ್, ಎಸ್‌ಐ ಸುನಿಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಈತನ ಬಂಧನದಿಂದ ಕನಕಲಬಂಡೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಆರೋಪಿಯನ್ನು ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
