ತುಮಕೂರು,ನ.2- ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಶಿಕ್ಷಕನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣ್ ಬಂಧಿತ ಆರೋಪಿ. ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ತುಮಕೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕ ಪ್ರವೀಣ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಶಾಲಾ ವಲಯದಲ್ಲಿ ಆತಂಕ ಮೂಡಿದ್ದು, ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸುವ ಅಗತ್ಯದ ಕುರಿತು ಚರ್ಚೆ ಆರಂಭವಾಗಿದೆ. ಬಂಧಿತ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
