ರಾಜ್ಯದಲ್ಲಿ 2ನೇ ಹಂತದ ಚುನಾವಣೆ, ನಾಮಪತ್ರ ವಾಪಸ್ಸಿಗೆ ಏ.8 ಕೊನೆ ದಿನ

ಬೆಂಗಳೂರು, ಏ.5- ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಪರಿಶೀಲನೆ ಇಂದು ನಡೆದಿದ್ದು, ಕೆಲವು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕøತಗೊಂಡಿದೆ. ನಾಮಪತ್ರ ಕ್ರಮಬದ್ಧವಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸಂಜೆ ವೇಳೆಗೆ ಪ್ರಕಟಿಸುವ ಸಾಧ್ಯತೆ ಇದೆ.

ಆಯಾ ಲೋಕಸಭೆ ಕ್ಷೇತ್ರಗಳ ಚುನಾವಣಾಧಿಕಾರಿಗಳು ನಿನ್ನೆಯವರೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ. 2ನೇ ಹಂತದಲ್ಲಿ 317 ಅಭ್ಯರ್ಥಿಗಳು 457 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಈ ಪೈಕಿ 303 ಪುರುಷ ಹಾಗೂ 14 ಮಹಿಳಾ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.  ಎರಡು ಹಂತದ ನಾಮಪತ್ರ ಸಲ್ಲಿಕೆ ಮುಗಿದಿದ್ದು , ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ, ಬಿಜೆಪಿ 27 ಕ್ಷೇತ್ರಗಳಲ್ಲಿ, ಜೆಡಿಎಸ್ 7 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕ್ಷೇತ್ರಗಳನ್ನು ಹಂಚಿಕೊಂಡು ಅಭ್ಯರ್ಥಿಗಳನ್ನುಕಣಕ್ಕಿಳಿಸಿವೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಟಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ಉಮೇದುವಾರರು ಸಲ್ಲಿಸಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ಏ.8ರವರೆಗೂ ಕಾಲಾವಕಾಶವಿದೆ.

ಏ.23ರಂದು ಮತದಾನ ನಡೆಯುವ ಎರಡನೇ ಹಂತದ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಬಳ್ಳಾರಿ, ಕಲಬುರಗಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲೂ ಚುನಾವಣೆ ಕಾವು ಏರತೊಡಗಿದ್ದು, ಅಬ್ಬರದ ಪ್ರಚಾರ ನಡೆಸಲಾಗುತ್ತಿದೆ.

ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿವಿಧ ರಾಜಕೀಯ ಪಕ್ಷಗಳು, ಪಕ್ಷೇತರರು ಸೇರಿದಂತೆ 241 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.  ಮೊದಲ ಹಂತದಲ್ಲಿ ಏ.18ರಂದು ಮತದಾನ ನಡೆಯಲಿದ್ದು, ಎರಡೂ ಹಂತದ ಮತ ಎಣಿಕೆ ಮೇ 23ರಂದು ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.

Sri Raghav

Admin