ನವದೆಹಲಿ, ಅ.8- ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಬಾರದು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಖ್ಯಾತ ಚಿತ್ರ ನಟ ದರ್ಶನ್‌ಗೆ ಅಲ್ಲೂ ಮುಖಭಂಗವಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲನವಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿರುವ ಪ್ರದೂಷ್ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸದೆ ಹಾಗೂ ಸಹ-ಆರೋಪಿಗಳ ಗಮನಕ್ಕೆ ತರದೆ ಆತನಿಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಲಾಗಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದ ನಂತರ, ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲನವಿ ಸಲ್ಲಿಸಿದ್ದರು.ನ್ಯಾಯಮೂರ್ತಿಗಳ ಪೀಠದಲ್ಲಿ ನಡೆದ ವಾದ-ಪ್ರತಿವಾದದ ಬಳಿಕ, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ವಿಜಯಲಕ್ಷ್ಮಿ ಅವರ ಅರ್ಜಿಯನ್ನು ವಜಾಗೊಳಿಸಿದೆ.ಹೀಗಾಗಿ ಚಿತ್ರನಟ ದರ್ಶನ್‌ಗೆ ಅನ್ಯ ಮಾರ್ಗವಿಲ್ಲದೆ ಮುಂದೆನಾಗುವುದೋ ಎಂದು ಕಾದು ನೋಡುವಂತಹ ಪರಿಸ್ಥಿತಿ ಎದುರಾಗಿದೆ.
