ಬೆಂಗಳೂರು,ಜ.3-ಪೊಲೀಯೋ ರೋಗದಂತೆ ಕೋವಿಡ್‍ನ್ನು ಸಂಪೂರ್ಣ ನಿರ್ನಾಮ ಮಾಡಲು ಕಡ್ಡಾಯವಾಗಿ ಪ್ರತಿಯೊಬ್ಬರು ಲಸಿಕೆ ಪಡೆಯಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮೂಡಲಪಾಳ್ಯದ ಬಿಬಿಎಂಪಿ ಪ್ರೌಢಶಾಲಾ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ 8.65 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದಲ್ಲಿ 145 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಪೊಲೀಯೋವನ್ನು 2014ಕ್ಕೆ ದೇಶದಿಂದಲೇ ನಿರ್ಮೂಲನೆ ಮಾಡಲು ಸಾಧ್ಯವಾಗಿದ್ದು ಲಸಿಕೆಯಿಂದ ಎಂಬುದನ್ನು ಮರೆಯಬಾರದು. ತಮಿಳುನಾಡು ಮಹಾರಾಷ್ಟ್ರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಿದೆ.
ಶೇ.0.4ರಷ್ಟಿದೆ. ಕಾಲ ಕಾಲಕ್ಕೆ ಮುಖ್ಯಮಂತ್ರಿಗಳು ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ತಜ್ಞರೊಂದಿಗೆ ಸಭೆ ನಡೆಸಿ ರೋಗ ಹರಡುವಿಕೆ ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇಂದು ಸಂಜೆ ಕೂಡ ಮತ್ತೊಂದು ಸಭೆ ನಡೆಸಲಿದ್ದಾರೆ ಎಂದರು.
ಇಂದಿನಿಂದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಾಗಿದೆ. ವಿಶ್ವದಲ್ಲೇ ಭಾರತ ಲಸಿಕೆ ನೀಡಿಕೆಯಲ್ಲಿ ದೊಡ್ಡ ಸಾಧನೆ ಮಾಡಿದೆ. ಹಲವು ದೇಶಗಳು ಆತಂಕ ವ್ಯಕ್ತಪಡಿಸುತ್ತಿದ್ದಾಗ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್ ನಿರ್ವಹಣೆಯನ್ನು ಅತ್ಯುತ್ತಮವಾಗಿ ಮಾಡಲಾಯಿತು. ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಜನರು ಲಸಿಕೆ ಪಡೆಯಲು ಸಾಧ್ಯವಾಯಿತು ಎಂದು ವಿವರಿಸಿದರು.
