ಬೆಂಗಳೂರು,ಜ.28- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬಿಎಸ್‍ವೈ ಅವರ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ (30) ಮನೆಯಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನೆ ಕುರಿತಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಸೌಂದರ್ಯ ಅವರ ಆತ್ಮಹತ್ಯೆಗೆ ನಿಖರ ಕಾರಣ ಸದ್ಯ ತಿಳಿದು ಬಂದಿಲ್ಲ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಹಲವು ರಾಜಕೀಯ ಮುಖಂಡರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಸೌಂದರ್ಯ ಅವರು ಡಾ.ನೀರಜ್ ಎಂಬುವರನ್ನು ವಿವಾಹವಾಗಿದ್ದು, ಅವರಿಗೆ ಒಂದು ಮಗು ಇದೆ ಎಂದು ಹೇಳಲಾಗುತ್ತಿದ್ದು, ವಸಂತನಗರದ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
