ನವದೆಹಲಿ, ಡಿ.31– ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ದಾದಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭರವಸೆ ನೀಡಿದೆ.
ಕೇರಳದ ದಾದಿ ನಿಮಿಷಾ ಪ್ರಿಯಾಗೆ ಮರಣದಂಡನೆ ವಿಧಿಸುವುದಕ್ಕೆ ಅಲ್ಲಿನ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ. ಹೀಗಾಗಿ ಆಕೆಯ ಪ್ರಾಣ ರಕ್ಷಣೆಗೆ ಭಾರತ ಅಲ್ಲಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧ್ಯಕ್ಷರು ಅನುಮೋದಿಸುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಬೆಳಿಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮತ್ತು ಎಂಇಎಯ ಅಧಿಕತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯು ಹೀಗೆ ಹೇಳಿದೆ. ನಿಮಿಷಾ ಪ್ರಿಯಾ ಅವರಿಗೆ ಯೆಮೆನ್‌ನಲ್ಲಿ ಶಿಕ್ಷೆ ವಿಧಿಸುವ ಬಗ್ಗೆ ನಮಗೆ ತಿಳಿದಿದೆ. ಪ್ರಿಯಾ ಅವರ ಕುಟುಂಬವು ಸಂಬಂಧಿತ ಆಯ್ಕೆಗಳನ್ನು ಅನ್ವೇಷಿಸುತ್ತಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸರ್ಕಾರ ಈ ವಿಷಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಲಾಗಿದೆ.