Friday, May 24, 2024
Homeರಾಜ್ಯಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಎಚ್‍ಡಿಕೆ ಚೇತರಿಕೆ, ಭಾನುವಾರ ಡಿಸ್ಚಾರ್ಜ್ ಸಾಧ್ಯತೆ

ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಎಚ್‍ಡಿಕೆ ಚೇತರಿಕೆ, ಭಾನುವಾರ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು,ಮಾ.22- ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಕುಮಾರಸ್ವಾಮಿ ಅವರ ಕಚೇರಿ ಮೂಲಗಳು ತಿಳಿಸಿವೆ.

ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿ ಸತೀಶ್, ಹಂಗೇರಿಯ ತಜ್ಞ ವೈದ್ಯಡಾ.ಗೀಜಾ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿದ್ದು ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲ್ವಿಚಾರಣೆಯನ್ನು ಮಾಡುತ್ತಿದೆ.

ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕುಮಾರಸ್ವಾಮಿ ಅವರನ್ನು ವಾರ್ಡ್‍ಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಡಾ.ಸಿ.ಎನ್.ಮಂಜುನಾಥ್ ಅವರು ಮಾತನಾಡಿ, ಕುಮಾರಸ್ವಾಮಿ ಅವರಿಗೆ ಈಗಾಗಲೇ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ನಿನ್ನೆ ಮತ್ತೊಂದು ಶಸ್ತ್ರ ಚಿಕಿತ್ಸೆ ಮೂಲಕ ಹೃದಯದ ಕವಾಟ ಬದಲಾವಣೆ ಮಾಡಲಾಗಿದೆ.

ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆಯೇ ಆಂಜಿಯೋಗ್ರಾಂ ಮಾದರಿಯಂತೆ ಯಶಸ್ವಿಯಾಗಿ ಹೃದಯದ ಕವಾಟವನ್ನು ಜೋಡಿಸಲಾಗಿದೆ. ಲವಲವಿಕೆಯಿಂದ ಇದ್ದು ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಈ ನಡುವೆ ನಿನ್ನೆ ಅವರ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿ, ತಮ್ಮ ತಂದೆಯ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದರು.

RELATED ARTICLES

Latest News