Thursday, November 21, 2024
Homeರಾಜ್ಯಮಾಜಿ ಸಚಿವ ಮನೋಹರ ತಹಸೀಲ್ದಾರ ನಿಧನ

ಮಾಜಿ ಸಚಿವ ಮನೋಹರ ತಹಸೀಲ್ದಾರ ನಿಧನ

Former Minister Manohar Tahsildar passes away

ಬೆಂಗಳೂರು, ನ.21-ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ್‌ ತಹಶೀಲ್ದಾರ್‌ (78) ಚಿಕಿತ್ಸೆ ಫಲಿಸದೇ ನಗರದ ಶಂಕರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನೋಹರ ತಹಶೀಲ್ದಾರ ಅವರು ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರು, ಅಭಿಮಾನಿಗಳನ್ನು ಅಗಲಿದ್ದಾರೆ.

ಮೊದಲ ಬಾರಿಗೆ 1978ರಲ್ಲಿ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಚುನಾಯಿತರಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು, 1989, 1999, 2013 ಸೇರಿದಂತೆ 4 ಬಾರಿ ವಿಧಾನಸಭೆ ಪ್ರವೇಶ ಮಾಡಿದ್ದರು. ಎಸ್‌‍.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿಧಾನಸಭೆ ಉಪಾಧ್ಯಕ್ಷರಾಗಿ ಮನೋಹರ್‌ ತಹಶೀಲ್ದಾರ್‌ ಸೇವೆ ಸಲ್ಲಿಸಿದ್ದರು.

2015ರಲ್ಲಿ ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣ ಕಾಂಗ್ರೆಸ್‌‍ ತೊರೆದು ಜೆಡಿಎಸ್‌‍ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಸಾರ್ವಜನಿಕರ ದರ್ಶನಕ್ಕೆ ಅವಕಾಶ:
ಮನೋಹರ ತಹಶೀಲ್ದಾರ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 ಗಂಟೆಯಿಂದ ಹಾನಗಲ್ಲ ಪಟ್ಟಣದ ಎನ್‌ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ನಾಳೆ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಸಂತಾಪ : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ರಾಜ್ಯ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ , ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಅನೇಕ ಗಣ್ಯರು ಮನೋಹರ್‌ ತಹಶೀಲ್ದಾರ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

RELATED ARTICLES

Latest News