ಬೆಂಗಳೂರು, ಜ.22- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಗೌಡರು ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವ್ ಬಂದಿದ್ದರೂ ಗೌಡರು ಆರೋಗ್ಯವಾಗಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಕೋವಿಡ್ ಎರಡನೆ ಅಲೆಯಲ್ಲೂ ಗೌಡರಿಗೆ ಸೋಂಕು ಕಾಣಿಸಿಕೊಂಡಿತ್ತು. ಆಗಲೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಎರಡು ಡೋಸ್ ಕೋವಿಡ್ ಲಸಿಕೆ ಕೂಡ ಗೌಡರು ಪಡೆದುಕೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ ಗೌಡರು ಜೆಪಿ ಭವನದಲ್ಲಿ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿದ್ದರು.
ಗೌಡರು ಶೀಘ್ರವಾಗಿ ಗುಣಮುಖರಾಗಲಿ ಎಂದು ಜೆಡಿಎಸ್ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾರೈಸಿದ್ದಾರೆ.
