ಬೆಂಗಳೂರು, ಆ.1- ನನೆಗುದಿಗೆ ಬಿದ್ದಿರುವ ಬಿಡದಿಯ ಉಪನಗರ ಯೋಜನೆ ಮುಂದುವರೆಯಲಿದೆ ಎಂದು ಸ್ಪಷ್ಟ ಪಡಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪರಿಹಾರದ ಪ್ರಮಾಣವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಮುಖ್ಯಮಂತ್ರಿಯವರು, ಹಿಂದಿನ ಸರ್ಕಾರ ನಿರ್ಧರಿಸಿದಂತೆ ಬಿಡದಿ ಸುತ್ತ ಮುತ್ತಲಿನ ಭೂಮಿಗಳು ರೆಡ್ ಝೋನ್ ನಲ್ಲೇ ಮುಂದುವರೆಯಲಿವೆ ಎಂದು ಮಹತ್ವದ ಸಂದೇಶ ನೀಡಿದ್ದಾರೆ.
ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಈ ಘೋಷಣೆ ಮಹತ್ವದ ಪಡೆದುಕೊಂಡಿದೆ. ವಿಡಿಯೋ ಸಂದೇಶದಲ್ಲಿ ಮುಖ್ಯಮಂತ್ರಿಯವರು, ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಿಡದಿ ಉಪನಗರ ಯೋಜನೆಗೆ ಮರುಜೀವ ನೀಡಲಾಗುತ್ತಿದೆ. ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ. ಈ ಸಂದರ್ಭದಲ್ಲಿ ರೈತರ ಹಿತರಕ್ಷಣೆ ನಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. ಹಿಂದಿನ ಸರ್ಕಾರ ಎಕರೆಗೆ ಕೇವಲ 25 ಲಕ್ಷ ರೂಪಾಯಿ ಭೂ ಪರಿಹಾರ ನಿಗದಿಪಡಿಸಿತ್ತು. ನಮ ಸರ್ಕಾರ ಪ್ರತಿ ಎಕರೆಗೆ 3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ ಶೇ.50 ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ ಸರ್ಕಾರ ಬದ್ಧವಾಗಿದೆ. ಎಲ್ಲರ ಸಹಕಾರವಿರಲಿ ಎಂದು ಮನವಿ ಮಾಡಿದ್ದಾರೆ.
