ಬೆಂಗಳೂರು, ಜೂ.21- ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ, ಸ್ಥಳೀಯ ಜನ ಪ್ರತಿನಿಧಿಗಳು, ರೈತಪರ ಸಂಘಟನೆಗಳೊಂದಿಗೆ ಜೆಡಿಎಸ್ ಇಂದು ಅಂಚಿಪುರ ಗ್ರಾಮದಿಂದ ಹೊಸೂರುವರೆಗೆ ಬೃಹತ್ ಪಾದಯಾತ್ರೆ ನಡೆಸಿತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಮಾಜಿ ಶಾಸಕ ಎ. ಮಂಜುನಾಥ್, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹೆಚ್.ಸಿ.ಜಯಮುತ್ತು ಮೊದಲಾದವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.
ಅಂಚಿಪುರ ಗ್ರಾಮದ ಶಕ್ತಿ ದೇವತೆ ಮಾರಮ ದೇವಿಗೆ ಪೂಜೆ ಸಲ್ಲಿಸಿದ ನಂತರ ಪಾದಯಾತ್ರೆ ಪ್ರಾರಂಭವಾಯಿತು. ಅಂಚಿಪುರ ಗ್ರಾಮದಿಂದ ಹೊಸೂರುವರೆಗೆ 8 ಗ್ರಾಮಗಳ ಮೂಲಕ ಈ ಪಾದಯಾತ್ರೆ ನಡೆಸಿದ್ದು, ಅಪಾರ ಪ್ರಮಾಣದ ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಂದು ಬೆಳಿಗ್ಗೆ ಅಂಚಿಪುರದಿಂದ ಆರಂಭವಾದ ಪಾದಯಾತ್ರೆಯು ಅಂಚಿಪುರ ಕಾಲೋನಿ, ಬನ್ನಿಗಿರಿ, ಮರೇವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಹಾಗೂ ಹೊಸೂರುವರೆಗೂ ಸಾಗಿತು. ಹೊಸೂರಿನಲ್ಲಿ ಬಹಿರಂಗ ಸಭೆಯೊಂದಿಗೆ ಸಮಾರೋಪಗೊಂಡಿತು.
ಸರ್ಕಾರದ ವಿರುದ್ಧದ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಪಾದಯಾತ್ರೆಯಲ್ಲಿ ಪಾಲ್ಗೊಂಡ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ನಮ ಭೂಮಿ ನಮ ಹಕ್ಕು. ರೈತರ ಬದುಕು ಮತ್ತು ಕೃಷಿ ಚಟುವಟಿಕೆಗಳನ್ನು ಉಳಿಸಲು ಈ ಹೋರಾಟ ಹಮಿಕೊಂಡಿದ್ದು, ಅಂಚಿಪುರ, ಬನ್ನಿಗಿರಿ, ಗೊಲ್ಲಹಳ್ಳಿ ಸೇರಿದಂತೆ 8 ಗ್ರಾಮಗಳ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ತಿಳಿಸಿದರು.
ಬಿಡದಿ ಟೌನ್‌ಶಿಪ್ ಯೋಜನೆಯಡಿ ವಿವಿಧ ಗ್ರಾಮಗಳ 518 ಎಕರೆ ಕೃಷಿ ಭೂಮಿಗೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಜೊತೆಗೆ ಹೆಚ್ಚುವರಿ 7,481 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ 755 ರೈತ ಕುಟುಂಬಗಳು, ಮಾಸಿಕ 6 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಹೈನುಗಾರಿಕೆ, ರೇಷೆ, ತೋಟಗಾರಿಕೆ ಹಾಗೂ 10 ಲಕ್ಷ ಹಸಿರು ವೃಕ್ಷಗಳಿಗೆ ಧಕ್ಕೆಯಾಗಲಿದೆ ಎಂದು ಅವರು ಆರೋಪಿಸಿದರು.
ಕಳೆದ 450ಕ್ಕೂ ಹೆಚ್ಚು ದಿನಗಳಿಂದ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಯೋಜನೆಯಿಂದ ರೈತರ ಬದುಕಿಗೆ ತೊಂದರೆಯಾಗಲಿದ್ದು, ನಮ ಈ ಹೋರಾಟ ಪಕ್ಷಾತೀತವಾಗಿ ನಡೆಯಲಿದ್ದು, ಸರ್ಕಾರದ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.
