Homeಬೆಂಗಳೂರುಪ್ಲಾಸ್ಟಿಕ್‌ ಮುಕ್ತ ಕಡಲೆಕಾಯಿ ಪರಿಷೆಗೆ ಪಣ

ಪ್ಲಾಸ್ಟಿಕ್‌ ಮುಕ್ತ ಕಡಲೆಕಾಯಿ ಪರಿಷೆಗೆ ಪಣ

ಬೆಂಗಳೂರು, ನ.28 – ಮಲ್ಲೇಶ್ವರದ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಆವರಣದಲ್ಲಿ 10ನೇ ವರ್ಷದ ಕಡಲೆಕಾಯಿ ಪರಿಷೆ ಇಂದಿನಿಂದ ಆರಂಭವಾಗಿದ್ದು, ಪ್ಲಾಸ್ಟಿಕ್‌ ಮುಕ್ತ ಪರಿಷೆಗೆ ಪಣ ತೊಡಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಿಷೆಯಲ್ಲಿ ರೈತರಿಗೆ ನೇರ ಮಾರುಕಟ್ಟೆ ಒದಗಿಸುವುದು, ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕುವುದು ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಆಯೋಜಕರು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪರಿಷೆಯಲ್ಲಿ ಈ ಬಾರಿ ಸುಮಾರು 600 ಉಚಿತ ಮಳಿಗೆಗಳನ್ನು ತೆರೆಯಲಾಗಿದ್ದು, ರೈತರು ಮತ್ತು ವ್ಯಾಪಾರಿಗಳಿಗೆ ನೇರವಾಗಿ ಗ್ರಾಹಕರಿಗೆ ಕಡಲೆಕಾಯಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪ್ಲಾಸ್ಟಿಕ್‌ ಮುಕ್ತ ಪರಿಷೆಗೆ ಪಣ: ಪರಿಷೆಯನ್ನು ಪ್ಲಾಸ್ಟಿಕ್‌ ಮುಕ್ತವಾಗಿ ನಡೆಸಲು ಆಯೋಜಕರು ಮುಂದಾಗಿದ್ದಾರೆ. ಸ್ವಯಂಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಮಾರಾಟಗಾರರಿಗೆ ಪೇಪರ್‌ ಬ್ಯಾಗ್‌ಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಪ್ಲಾಸ್ಟಿಕ್‌ ಕವರ್‌ಗಳ ಬಳಕೆ ಮಾಡದಂತೆ ಸಾರ್ವಜನಿಕರು ಹಾಗೂ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಈ ಕುರಿತು ಮಾತನಾಡಿದ ಕಾಡುಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ. ಶಿವರಾಂ, ಈ ಬಾರಿ ಪರಿಸರ ಸ್ನೇಹಿ ಪರಿಷೆಗೆ ಆದ್ಯತೆ ನೀಡಲಾಗಿದೆ. ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಿ, ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಹೊರರಾಜ್ಯದ ರೈತರ ಆಗಮನ: ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಇರುವುದರಿಂದ ಈ ಬಾರಿ ಕರ್ನಾಟಕದ ರೈತರು ನಿರೀಕ್ಷಿತ ಪ್ರಮಾಣದಲ್ಲಿ ಆಗಮಿಸುತ್ತಿಲ್ಲ. ಆದರೆ, ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದ ರೈತರು ಕಡಲೆಕಾಯಿ ಮಾರಾಟಕ್ಕೆ ಆಗಮಿಸಿದ್ದಾರೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ನೇರ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಸುಮಾರು 600 ಮಳಿಗೆಗಳನ್ನು ಉಚಿತವಾಗಿ ನೀಡಲಾಗಿದೆ ಎಂದು ಶಿವರಾಂ ಹೇಳಿದರು.

ಪರಿಷೆಗೆ ಪ್ರತಿದಿನ ಲಕ್ಷಾಂತರ ಜನರು ಭೇಟಿ ನೀಡುವ ನಿರೀಕ್ಷೆಯಿದ್ದು, ಜನದಟ್ಟಣೆ ನಿಯಂತ್ರಣ ಮತ್ತು ಭದ್ರತೆಗಾಗಿ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜತೆಗೆ, 500 ಸ್ವಯಂಸೇವಕರನ್ನು ನಿಯೋಜಿಸಲಾಗಿದೆ.

ಅನ್ನದಾಸೋಹ ಭವನಕ್ಕೆ ಶಂಕುಸ್ಥಾಪನೆ: ಪರಿಷೆ ಮುಕ್ತಾಯದ ಬಳಿಕ ದೇವಾಲಯದಲ್ಲಿ ಅನ್ನದಾಸೋಹ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಉದ್ದೇಶಿಸಲಾಗಿದೆ. ದೇವಾಲಯದ ಆಸ್ತಿಯ ಸಂರಕ್ಷಣೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಶಿವರಾಂ, ಸುಮಾರು 48 ಕೋಟಿ ರೂ. ಮೌಲ್ಯದ ದೇವಾಲಯದ ಭೂಮಿಯನ್ನು ಕಬಳಿಸುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಈ ಆಸ್ತಿಯಿಂದ ದೇವಾಲಯಕ್ಕೆ ತಿಂಗಳಿಗೆ 4.5 ಲಕ್ಷ ರೂ. ಬಾಡಿಗೆ ಆದಾಯ ದೊರೆಯುತ್ತಿದೆ ಎಂದು ತಿಳಿಸಿದರು.

ಕಡಲೆಕಾಯಿ ಪರಿಷೆಯ ಹಿನ್ನೆಲೆಯಲ್ಲಿ ಮಲ್ಲೇಶ್ವರದ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ. ಪರಿಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿರುವುದರಿಂದ ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ, ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ. ವಾಹನ ಸವಾರರು ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

RELATED ARTICLES

Latest News