ಬೆಂಗಳೂರು,ಅ.2- ಮಹಾತ್ಮ ಗಾಂಧೀಯವರು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಗಾಂಧಿನಡಿಗೆಯನ್ನು ಆಯೋಜಿಸಲಾಗಿತ್ತು.ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಜೊತೆಗೂಡಿ ಬೆಂಗಳೂರು ಸೇರಿದಂತೆ ಹಲವು ಕಡೆ ಜನಪ್ರತಿನಿಧಿಗಳು, ಕಾಂಗ್ರೆಸ್ ಪ್ರಮುಖ ನಾಯಕರು ಗಾಂಧಿ ನಡಿಗೆಯಲ್ಲಿ ಹೆಜ್ಜೆ ಹಾಕಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಶಾಸಕರಾದ ರಿಜ್ವಾನ್ ಹರ್ಷದ್, ಮುಖಂಡರಾದ ವಿ.ಎಸ್.ಉಗ್ರಪ್ಪ, ಗಾಂಧಿ ಪ್ರತಿಷ್ಠಾನದ ವೂಡೆ ಪಿ ಕೃಷ್ಣ ಸೇರಿದಂತೆ ಮತ್ತಿತರರು ಗಾಂಧಿಭವನದ ಬಳಿಯಿರುವ ಮಹಾತ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾಲ್ನಡಿಗೆ ಜಾಥಾ ಆರಂಭಿಸಿದರು.
ಅಲ್ಲಿಂದ ರೇಸ್ಕೋರ್ಸ್ ರಸ್ತೆ, ಚಾಲುಕ್ಯ ವೃತ್ತದ ಮೂಲಕ ವಿಧಾನಸೌಧದ ಬಳಿಯಿರುವ ಮಹಾತಗಾಂಧೀಜಿ ಪ್ರತಿಮೆವರೆಗೂ ಗಾಂಧಿ ನಡಿಗೆ ನಡೆಯಿತು. ಡಿ.ಕೆ.ಶಿವಕುಮಾರ್ರವರು ರಾಷ್ಟ್ರಧ್ವಜ ಹಿಡಿದು ಸಿದ್ದರಾಮಯ್ಯನವರೊಂದಿಗೆ ಹೆಜ್ಜೆ ಹಾಕಿದರು.ಆರಂಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ಗಾಂಧಿ ಟೋಪಿ ತೊಡಿಸಿದರು. ಬಿಬಿಎಂಪಿಯ ಹಿರಿಯ ಅಧಿಕಾರಿಗಳಿಗೂ ಗಾಂಧಿ ಟೋಪಿಯನ್ನು ತೊಡಿಸಲಾಯಿತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ರವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇತೃತ್ವ ವಹಿಸಿದ್ದರು. ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಲಾಯಿತು. ಅಹಿಂಸಾ ಮಾರ್ಗವಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿ ಯಶಸ್ವಿಯಾದರು. 1924 ರಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆದ ಶತಮಾನೋತ್ಸವ ನೆನಪಿಗಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾಲ್ನಡಿಗೆ ಜಾಥಾದಲ್ಲಿ ಸಚಿವರು ತಮ ಉಸ್ತುವಾರಿ ಜಿಲ್ಲೆಗಳಲ್ಲಿ ಹಾಗೂ ಶಾಸಕರು ತಮ ಕ್ಷೇತ್ರಗಳಲ್ಲಿ ಭಾಗವಹಿಸಿದ್ದರು. ನಂತರ ಸ್ವಚ್ಛತಾ ಅಭಿಯಾನದಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡರು.