ಬೆಂಗಳೂರು, ನ.1- ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡ ಶಾಲೆಗಳ ಸೌಲಭ್ಯ ಸುಧಾರಣೆಗೆ ತಮ್ಮ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಇಲಾಖೆಯ ಪ್ರಸ್ತಾವನೆ ಆಧರಿಸಿ ಇಂದಿನಿಂದ ಉಚಿತ ವಿದ್ಯುತ್, ನೀರಿನ ಸೌಲಭ್ಯ ಕಲ್ಪಿಸುವುದಾಗಿ ಹೇಳಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇವರಾಜು ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಅದರ ಪ್ರಯುಕ್ತ ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ ಎಂಬ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ವರ್ಷ ಪೂರ್ತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಬಜೆಟ್‍ನಲ್ಲೂ ಕಾರ್ಯಕ್ರಮ ಘೋಷಣೆ ಮಾಡಿ ಅನುದಾನವನ್ನೂ ಮೀಸಲಿಡಲಾಗಿದೆ. ಹಿಂದಿನ ವರ್ಷವೇ ಈ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಆಗಿನ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದರು.
ಈ ದಿನದಿಂದ ನಾವು ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ಮಾಡಬೇಕಿದೆ. ಈ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸಬೇಕು. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು. ನೆರೆ ರಾಜ್ಯದಷ್ಟು ನಾವು ಭಾಷಾಭಿಮಾನಿಗಳಲ್ಲ, ಆದರೆ ಹೆಚ್ಚು ಧಾರಾಳತನ ಅನಗತ್ಯ. ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಸ್ಥಳೀಯ ಅಕೃತ ಭಾಷೆ ಮಾತನಾಡದೆ ಬದುಕಲಾಗಲ್ಲ ಎಂಬ ವಾತಾವಣ ಇದೆ. ಆದರೆ ಕರ್ನಾಟಕದಲ್ಲಿ ಕನ್ನಡ ಮಾತನಾಡದೆ ಬದುಕು ನಡೆಸಬಹುದಾದ ಪರಿಸ್ಥಿತಿ ನಮ್ಮಲ್ಲಿದೆ. ಯಾವ ಭಾಷೆ ಬೇಕಾದರೂ ಕಲಿಯಿತು. ಆದರೆ ನಮ್ಮ ಸಾರ್ವಭೌಮ ಕನ್ನಡ ಭಾಷೆಯನ್ನು ಮಾತನಾಡಿ.
ಸರ್ಕಾರದಲ್ಲಿ ನಡೆಯುವ ಆಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಇಲ್ಲಿ ಕೆಲಸ ಮಾಡುವವರು ಕನ್ನಡದಲ್ಲೇ ವ್ಯವಹರಿಸಬೇಕಾಗುತ್ತದೆ. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಆಗ ಮಾತ್ರ ಸುಗಮ ಆಡಳಿತ ಸಾಧ್ಯವಾಗಲಿದೆ ಎಂದು ಸೂಚಿಸಿದರು.
ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು. ಇಂಗ್ಲಿಷ್‍ನಲ್ಲಿ ಕಲಿತರೆ ಮಾತ್ರ ಜ್ಞಾನ ಸಂಪಾದನೆ ಎಂಬ ನಂಬಿಕೆ ಸರಿಯಲ್ಲ.
ಮಹತ್ವದ ಮಾಹಿತಿ : ನಿಮ್ಮ ಆಧಾರ್ ಬಯೋಮೆಟ್ರಿಕ್ ಲಾಕ್ ಮಾಡೋದು ಹೇಗೆ..?
ಕನ್ನಡ ಶಾಲೆಯಲ್ಲಿ ಓದುವ ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಸೇರಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದ ಅವರು, ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ. ಕನ್ನಡ ಶಾಲೆಗಳಲ್ಲಿ ಉತ್ತಮ ಕಲಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕನಿಷ್ಠ ಎಸ್‍ಎಸ್‍ಎಲ್‍ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಕಲಿಸಬೇಕು. ಕನ್ನಡದಲ್ಲಿ ಓದಿದ ಅನೇಕರು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನಿಗಳಾಗಿದ್ದಾರೆ ಎಂದರು.
ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚಖಾತ್ರಿ ಯೋಜನೆಗಳ ಪೈಕಿ ನಾಲ್ಕು ಯಶಸ್ವಿಯಾಗಿ ಜಾರಿಗೆ ತಂದಿದೆ. ಕನ್ನಡಿಗರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಕನ್ನಡಿಗರು ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಿಸಲು ಅಗತ್ಯ ವಾತಾವರಣ ನಿರ್ಮಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಆರ್.ವಿ.ದೇಶಪಾಂಡೆ, ರಿಜ್ವಾನ್ ಹರ್ಷದ್, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ, ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿದೆ 8 ಅಡಿ ಉದ್ದದ ಚಿನ್ನಲೇಪಿತ ರಾಮಲಲ್ಲಾ ವಿಗ್ರಹ
ವೇದಿಕೆಯ ಸಮೀಪದಲ್ಲೇ ಪ್ರತಿಷ್ಠಾಪಿಸಿದ್ದ ಕನ್ನಡಾಂಬೆಯ ಪ್ರತಿಮೆಗೆ ಪುಷ್ಟ ನಮನ ಸಲ್ಲಿಸಿದ ಮುಖ್ಯಮಂತ್ರಿಯವರು, ವಿದ್ಯಾರ್ಥಿಗಳ ಪಥ ಸಂಚಲನದ ಗೌರವ ರಕ್ಷೆಯನ್ನು ಸ್ವೀಕರಿಸಿದರು. ಬಳಿಕ ರಾಷ್ಟ್ರ ಹಾಗೂ ಕನ್ನಡ ಧ್ವಜಾರೋಹಣ ನೇರವೇರಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವು ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.