ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆ ರಾಜ್ಯಪಾಲರ ಅಂಗಳಕ್ಕೆ

Spread the love

ಬೆಂಗಳೂರು,ಡಿ.29- ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡುವ ಸಲುವಾಗಿ ಸರ್ಕಾರ ತನ್ನ ಮಹತ್ವಾಕಾಂಕ್ಷಿಯ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಆ ಹಿನ್ನೆಲೆಯಲ್ಲಿ ರಾಜ್ಯಪಾಲರ ಅಂಕಿತಕ್ಕೆ ಇಂದು ಕಳುಹಿಸಲಿದೆ.

ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಲಾಗಿದ್ದು, ಅಂಕಿತಕ್ಕಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಮೂಲಕ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲರು ಅಂಕಿತ ಹಾಕಿದ ನಂತರ ಅಧಿಕೃತವಾಗಿ ಕಾಯ್ದೆ ಜಾರಿಗೆ ಬರಲಿದೆ. ನಂತರ ಆರು ತಿಂಗಳೊಳಗಾಗಿ ಸರ್ಕಾರ ಸುಗ್ರೀವಾಜ್ಞೆಯನ್ನು ವಿಧಾನಮಂಡಲದ ಎರಡೂ ಸದನದಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕಾಗುತ್ತದೆ. ಆದರೆ ಜೆಡಿಎಸ್ ಬೆಂಬಲ ಕೊಡದೇ ಇದ್ದುದರಿಂದ ವಿಧಾನ ಪರಿಷತ್‍ನಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಿರಲಿಲ್ಲ.

ಹೀಗಾಗಿ ಸುಗ್ರೀವಾಜ್ಞೆ ಮೂಲಕ ಇದೀಗ ಕಾಯ್ದೆ ಜಾರಿಗೆ ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದ್ದು, ಹೊಸ ವರ್ಷದ ವಿಧಾನ ಮಂಡಳ ಜಂಟಿ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.

Facebook Comments